Home Mangalorean News Kannada News ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ: ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಡಿಸಿ ಸೂಚನೆ

ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ: ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಡಿಸಿ ಸೂಚನೆ

Spread the love

ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ: ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಡಿಸಿ ಸೂಚನೆ

ಮಂಗಳೂರು: ನೇತ್ರಾವತಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನದಿ ತೀರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.

ಈಗಾಗಲೇ ನದಿ ತೀರದ ಪ್ರಮುಖ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.

ಉಪ್ಪಿನಂಗಡಿಯಿಂದ ಮಂಗಳೂರುವರೆಗೆ ನೇತ್ರಾವತಿ ನದಿ ತೀರದ ಎರಡೂ ಬದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ತಕ್ಷಣದಿಂದಲೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರುಲುವಂತೆ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಕುಮಾರಧಾರ, ನೇತ್ರಾವತಿ ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿದ್ದು ಸಮೀಪದ ಹಲವು ಪ್ರದೇಶಗಳು ಜಲಾವೃತಗೊಂಡಿವೆ.

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಯು ಶ್ರೀ ಮಹಾಕಾಳಿ ದೇವಾಲಯವನ್ನು ದಾಟಿ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದ ಆವರಣದತ್ತ ಬಂದಿದ್ದು ದೇವಾಲಯದ ಇನ್ನೊಂದು ಬದಿಯಿಂದ ಕುಮಾರಧಾರ ನದಿಯ ನೀರು ಬಂದರೆ ಎರಡು ನದಿಗಳು ದೇವಾಲಯದ ಮುಂಭಾಗ ಸಂಗಮವಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಸಂಗಮದ ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಜನರು ತಂಡೋಪ-ತಂಡವಾಗಿ ದೇವಾಲಯದತ್ತ ಆಗಮಿಸುತ್ತಿದ್ದಾರೆ. ನೆರೆಯ ಹಿನ್ನೆಲೆಯಲ್ಲಿ ಆಡಳಿತ ವರ್ಗ ಕಟ್ಟೆಚ್ಚರ ವಹಿಸಿದ್ದು, ತಕ್ಷಣದ ರಕ್ಷಣಾ ಕಾರ್ಯಾಚರಣೆಗೆ ಸಿದ್ಧಗೊಂಡು ನಿಂತಿದೆ.


Spread the love

Exit mobile version