ಆಯುಷ್ಮಾನ್ ಭಾರತ ಯೋಜನೆಯಲ್ಲಿ 3 ನೇ ಹಂತದ ರೋಗಗಳಿಗೆ ರೆಫರಲ್ ಪತ್ರ ರದ್ದು- ಸಚಿವ ಶ್ರೀರಾಮುಲು
ಉಡುಪಿ : ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ವಿವಿಧ ರೋಗಗಳಿಗೆ ಸರ್ಕಾರಿ ಆಸ್ಪತ್ರೆಯ ರೆಫರಲ್ ಪತ್ರ ಪಡೆಯಬೇಕಿದ್ದು, ಇದನ್ನು 1 ಮತ್ತು 2 ಹಂತದ ಕಾಯಿಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗುವುದು, 3 ಹಂತದಲ್ಲಿರುವ ರೋಗಗಳಿಗೆ ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯಬಹುದು, ಈ ಕುರಿತಂತೆ ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಅವರು ಶನಿವಾರ, ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಮಾತನಾಡಿದರು.
ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ವೈದ್ಯರು ಮತ್ತು ಸಿಬ್ಬಂದಿಯ ಜೊತೆಗೆ , ಸರ್ಕಾರಿ ವೈದ್ಯರು ಮತ್ತು ಸಿಬ್ಬಂದಿಗಳನ್ನು ಒಳಗೊಂಡ ಯುನಿಟ್ ಸಹ ಕಾರ್ಯ ನಿರ್ವಹಿಸುವ ಕುರಿತಂತೆ , ಉಡುಪಿ ಶಾಸಕರು ಸಲ್ಲಿಸಿರುವ ಮನವಿಯ ಮೇರೆಗೆ ಸದ್ರಿ ಆಸ್ಪತ್ರೆಯ ಮುಖ್ಯಸ್ಥರು, ಇಲಾಖೆಯ ಕಾರ್ಯದರ್ಶಿಗಳೊಂದಿಗೆ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್,ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಿಹೆಚ್ಓ ಡಾ.ಅಶೋಕ್, ಆಸ್ಪತ್ರೆಯ ಮೆನೇಜರ್ ಕುಶಲ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.