ಉಡುಪಿ: ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ

Spread the love

ಉಡುಪಿ: ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿನ ಕೋವಿಡ್-19 ಕೊರೋನಾ ರೋಗ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ, ರಾಷ್ಟ್ರೀ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನ್ಯಾಯಾಂಗ ಇಲಾಖೆ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ವಕೀಲರ ಸಂಘ (ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ, ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ ಜಿಲ್ಲಾ ನ್ಯಾಯಾಧೀಶ ಜೆ.ಎನ್.ಸುಬ್ರಮಣ್ಯ ಚಾಲನೆ ನೀಡಿದರು.

ಈ ಜನಾಂದೋಲನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಪ್ರತೀ ಮನೆಗೂ ಭೇಟಿ ನೀಡಿ, ಕೋವಿಡ್ ಕುರಿತು ಅರಿವು ಮೂಡಿಸುವುದರ ಜೊತೆಗೆ ಕೋವಿಡ್ ನಿಯಂತ್ರಣಕ್ಕಾಗಿ ಮನೆಯವರಿಂದ ಪ್ರತಿಜ್ಞೆ ಮಾಡಿಸಲಾಗುವುದು ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಕೋವಿಡ್ಗೆ ಪೂರ್ಣ ಪ್ರಮಾಣದ ಲಸಿಕೆ ಬರುವವರೆಗೂ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವುದು ಮತ್ತು ಆಗಾಗ್ಗೆ ಸುರಕ್ಷಿತ ಕೈ ತೊಳೆಯುವ ವಿಧಾನಗಳನ್ನು ಅನುಸರಿಸಬೇಕು, ಇಡೀ ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕುರಿತು ಮಾಹಿತಿ ನೀಡಲು ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಪ್ರತೀ ಮನೆಗೆ ಮಾಹಿತಿ ತಲುಪಿಸಲಾಗುವುದು, ಕುಟುಂಬನ್ನು ಕೋವಿಡ್ನಿಂದ ರಕ್ಷಿಸುವುದು ಪ್ರತಿಯೊಬ್ಬ ಕುಟುಂಬ ಸದಸ್ಯನ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ನಿಂದ ಇದುವರೆಗೆ 172 ಮಂದಿ ಮೃತಪಟ್ಟಿದ್ದು, ಅದರಲ್ಲಿ ಶೇ. 75 ಕ್ಕಿಂತ ಹೆಚ್ಚು ಸಾವುಗಳು 60 ವರ್ಷ ಮೇಲ್ಪಟ್ಟ ಹಾಗೂ ಇತರೆ ಖಾಯಿಲೆಗಳಿಂದ ಬಳಲುತ್ತಿದ್ದ ವ್ಯಕ್ತಿಗಳದಾಗಿದ್ದು, ಹಿರಿಯ ನಾಗರೀಕರಿಗೆ ಕೋವಿಡ್ನಿಂದ ಹೆಚ್ಚಿನ ಅಪಾಯವಿದ್ದು, ಮನೆಯಲ್ಲಿನ ಹಿರಿಯರ ಆರೋಗ್ಯದ ಜವಾಬ್ದಾರಿ ಪ್ರತಿಯೊಬ್ಬ ಕುಟುಂಬ ಸದಸ್ಯರ ಜವಾಬ್ದಾರಿಯಾಗಿದ್ದು, ಇದಕ್ಕಾಗಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಜನಾಂದೋಲನ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ, ಆದರೆ ರೋಗ ಹರಡದಂತೆ ತಡೆಯುವುದು ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿಯಾಗಿದ್ದು, ಸರಿಯಾದ ಕ್ರಮದಲ್ಲಿ ಮಾಸ್ಕ್ ಅಳವಡಿಕೆ, ಸಾಮಾಜಿಕ ಅಂತರ ಪಾಲನೆಯನ್ನು ಕಡ್ಡಾಯವಾಗಿ ಅನುಸರಿಸಬೇಕಿದ್ದು, ಕೋವಿಡ್ ಕೊನೆಗಾಣಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಅರೋಗ್ಯ ಇಲಾಖೆ ವತಿಯಿಂದ ಹೊರತಂದ ಕೋವಿಡ್ 19 ಮಾಹಿತಿ ಕುರಿತ ಸ್ಟಿಕರ್ನ್ನು ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ, ನ್ಯಾ.ವಿವೇಕಾನಂದ ಎಸ್ ಪಂಡಿತ್, ನ್ಯಾ.ಲಾವಣ್ಯ, ನ್ಯಾ.ಭವಾನಿ, ನ್ಯಾ.ಶೋಭಾ, ನ್ಯಾ.ಮಂಜುನಾಥ್, ನ್ಯಾ.ಮಹಾಂತೇಶ್ ಬೂಸಗೋಳ, ನ್ಯಾ.ನಿರ್ಮಲಾ, ಪೋಕ್ಸೋ ನ್ಯಾಯಾಲಯದ ನ್ಯಾ. ಯಾದವ ವನಮಾಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಡಾ. ಪ್ರೇಮಾನಂದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮ್ ಸಾಗರ್, ವಕೀಲರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ, ಸರ್ಕಾರಿ ಅಭಿಯೋಜಕಿ ಶಾಂತಾ ಬಾಯಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಸ್ವಾಗತಿಸಿದರು, ನ್ಯಾಯಾಧೀಶ ಇರ್ಫಾನ್ ವಂದಿಸಿದರು.


Spread the love