ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿ ಸಚಿವ ಪ್ರಮೋದ್ ಉದ್ಘಾಟನೆ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಕಚೇರಿಯನ್ನು ಶುಕ್ರವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು ಅನೇಕ ಜಿಲ್ಲೆಗಳಲ್ಲಿ ಇಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಚೇರಿಗಳಿಲ್ಲ ಆದರೆ, ಆಸ್ಕರ್ ಫೆರ್ನಾಂಡಿಸ್ ಅವರು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯಲ್ಲಿ ಪಕ್ಷಕ್ಕೆ ಸ್ವಂತ ಕಟ್ಟಡವನ್ನು ನಿರ್ಮಿಸಿಕೊಟ್ಟಿದ್ದಾರೆ. ಇದರಿಂದ ಪಕ್ಷದ ಕೆಲಸ ಕಾರ್ಯಗಳಿಗೆ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಸಾಕಷ್ಟು ಅನೂಕೂಲವಾಗಿದೆ. ಅದೇ ರೀತಿ ಉಡುಪಿ ಬ್ಲಾಕ್ ಕಾಂಗ್ರೆಸಿಗೂ ಒಂದು ಕಚೇರಿಯನ್ನು ಒದಗಿಸಿಕೊಟ್ಟಿದ್ದಾರೆ. ಆ ಕಚೇರಿಯ ಮೂಲಕ ಪಕ್ಷದ ಜನರ ಸೇವೆ ಆಗಬೇಕು ಎಂದರು.
ಸರ್ಕಾರ ಹಾಗೂ ರಾಜಕೀಯ ಪಕ್ಷವಿರುವುದು ಜನರ ಸೇವೆಗಾಗಿ ಎಂಬುದನ್ನು ಕಾರ್ಯಕರ್ತರು ಗಮನದಲ್ಲಿರಿಸಿಕೊಂಡು ಜನರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಆಗ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟಲು ಸಾಧ್ಯ ಎಂದರು.
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 35 ನಗರಸಭಾ ವಾರ್ಡ್ ಹಾಗೂ 30 ಗ್ರಾಮಗಳಲ್ಲಿ ಸೆಪ್ಟೆಂಬರ್ ಅಂತ್ಯದ ಒಳಗೆ ಒಟ್ಟು 65 ಜನಸಂಪರ್ಕ ಸಭೆ ನಡೆಯಲಿದ್ದು ಪ್ರತಿವಾರ ಒಂದು ಅಥವಾ ಎರಡು ಸಭೆಯನ್ನು ಏರ್ಪರ್ಡಿಸಲಾಗುತ್ತದೆ. ಆ ಮೂಲಕ ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆಯಲ್ಲಿ ಜನರ ಸಮಸ್ಯೆ ಆಲಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಯತೀಶ್ ಕರ್ಕೆರಾ, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಬ್ಲಾಕ್ ಮಹಿಳಾ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಗಣೇಶ್ ನೇರ್ಗಿ, ಉಡಾ ಅಧ್ಯಕ್ಷ ನರಸಿಂಹಮೂರ್ತಿ, ಸೆಲಿನಾ ಕರ್ಕಡ, ಹರೀಶ್ ಕಿಣಿ ಹಾಗೂ ಇತರರು ಉಪಸ್ಥಿತರಿದ್ದರು.