Home Mangalorean News Kannada News ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ

ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ

Spread the love

ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ

ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್ನಲ್ಲಿ ಸೋಮವಾರದೊಳಗೆ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.

ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿ ಏನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು.

ಹೀಗಾಗಿ ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು.

ಜೊತೆಗೆ ಎನ್.ಡಿ.ಆರ್.ಎಫ್. ನಿಂದ 4663 ಕೋಟಿ ರೂ. ಇನ್ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಇನ್ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು.

ದೆಹಲಿಯಲ್ಲಿ ರಾಜ್ಯ ಸರ್ಕಾರದ ಪ್ರತಿಭಟನೆ
ಕರ್ನಾಟಕ ಸರ್ಕಾರ ವರದಿ ಸಲ್ಲಿಸಿದ ಬಳಿಕ ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಅಧ್ಯಯನ ಮಾಡಿತು. ಬಳಿಕ ಕೇಂದ್ರ ಬರ ಅಧ್ಯಯನ ತಂಡ ಕೂಡ ವರದಿ ಸಿದ್ದಪಡಿಸಿ, ಸರ್ಕಾರದ ಮುಂದೆ ಇಟ್ಟಿತು. ಆದರೂ ಕೂಡ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡಿತು. ನಂತರ ರಾಜ್ಯ ಸರ್ಕಾರ ನವ ದೆಹಲಿಯಲ್ಲಿ ಕೇಂದ್ರ ವಿರುದ್ಧ ಪ್ರತಿಭಟನೆ ಮಾಡಿತು. ಇದಾದ ನಂತರ ಮುಖ್ಯಮಂತ್ರಿ ಆದಿಯಾಗಿ ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ವಾಗ್ದಾಳಿ ಮಾಡಿದರು.

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ
ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು (ಏ.22) ರಂದು ಅರ್ಜಿ ವಿಚಾರಣೆ ನಡೆಸಿತ್ತು. ಈ ವೇಳೆ ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ಅಟಾರ್ನಿ ಜನರಲ್ ವೆಂಕಟರಮಣಿ “ಸೋಮವಾರ (ಏ.29)ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಅದರಂತೆ ಕೇಂದ್ರ ಸರ್ಕಾರ ಇದೀಗ ಬರ ಪರಿಹಾರ ಬಿಡುಗಡೆ ಮಾಡಿದೆ.


Spread the love

Exit mobile version