ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ; ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಬಂಧನ
ಉಡುಪಿ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ನಗರದಲ್ಲಿ ರಸ್ತೆ ತಡೆ ಮಾಡಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ಕರ್ನಾಟಕ ಬಂದ್ ಕರೆ ನೀಡಲಾಗಿದ್ದು, ಬಂದ್ ಕರೆ ಕೊಟ್ಟರೂ ಸರ್ವಿಸ್ ಮತ್ತು ಸಿಟಿ ಬಸ್ಸುಗಳು ಬೆಳಗ್ಗೆ ನಿಲ್ದಾಣಕ್ಕೆ ಆಗಮಿಸಿರುವುದರಿಂದ ಬಂದ್ ಬೆಂಬಲ ಕೊಟ್ಟ ವಿವಿಧ ಸಂಘಟನೆಯವರು ಬಸ್ ಸಂಚಾರ ನಡೆಸದಂತೆ ಮನವಿ ಮಾಡಿದರೆನ್ನಲಾಗಿದೆ.
ಈ ವೇಳೆ ಬಸ್ ನಿರ್ವಾಹಕರು ಮತ್ತು ಚಾಲಕರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಚಾಲಕರ ಹಾಗೂ ನಿರ್ವಾಹಕರ ಧೋರಣೆ ವಿರೋಧಿಸಿ ಪ್ರತಿಭಟನಾಕಾರರು ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ನಡೆಸದಂತೆ ರಸ್ತೆ ತಡೆ ನಡೆಸಿದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.
ಬಂಧಿತರಲ್ಲಿ ಸಿಪಿಎಂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್, ನಗರಸಭಾ ಸದಸ್ಯ ರಮೇಶ್ ಕಾಂಚನ್, ದಸಂಸ ಮುಖಂಡ ಸುಂದರ್ ಮಾಸ್ಟರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.