ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಅವರಿಗೆ ಬೆದರಿಕೆ; ಎಸ್ಪಿಗೆ ದೂರು
ಉಡುಪಿ: ಮಿನುಗಾರಿಕಾ ಫಿಷರೀಸ್ ಫೆಡರೇಷನ್ನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಸಿಒಡಿ ತನಿಖೆಯನ್ನು ಚುರುಕುಗೊಳಿಸಬೇಕೆಂದು ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್ ನಡೆಸಿದ್ದ ಪತ್ರಿಕಾಗೋಷ್ಠಿಯ ಬಳಿಕ ಫೆಡರೇಷನ್ ಅಧ್ಯಕ್ಷರಾದ ಯಶಪಾಲ್ ಸುವರ್ಣ ಅವರು ಸಾಮಾಜಿಕ ಜಾಲತಾಣಗಳ ಮೂಲಕ ವಿಶ್ವಾಸ್ ಅಮೀನ್ ಅವರ ಕುಟುಂಬಕ್ಕೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ರವರಿಗೆ ದೂರು ನೀಡಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿದ ಸಮಯದಿಂದ ಯಶಪಾಲ್ ಸುವರ್ಣ ಹಾಗೂ ಅವರ ಸಂಗಡಿಗರಿಂದ ಹಲವು ರೀತಿಯಲ್ಲಿ ಬೆದರಿಕೆ ಬರುತ್ತಿದ್ದು ಈ ಬಗ್ಗೆ ದೂರನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷರಾದ ಯತೀಶ್ ಕರ್ಕೇರ, ಉಡುಪಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಬೈಂದೂರು ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಕುಂದಾಪುರ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯದರ್ಶಿ ಕಾರ್ತಿಕ್ ಅಮೀನ್, ಕಾಪು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಹಾಗೂ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದು ತಕ್ಷಣ ಕ್ರಮಕ್ಕೆ ಆಗ್ರಹಿಸಿದರು.