ದ.ಕ. ಜಿಲ್ಲೆಯಲ್ಲಿ ಮಕ್ಕಳ ಅಪಹರಣ ವದಂತಿ ಬಗ್ಗೆ ಸದನದಲ್ಲಿ ಕಾರ್ಣಿಕ್ ಪ್ರಸ್ತಾಪ
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕೇರಳ ಗಡಿ ಭಾಗದಿಂದ ಮಕ್ಕಳ ಅಪಹರಣ ಜಾಲವೊಂದು ಗಡಿನಾಡಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಅಪಹರಣದಂಥಹ ಅನೈತಿಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆಯೆಂದು ಈಗಾಗಲೇ 3-4 ಮಕ್ಕಳು ಅಪಹೃತರಾಗಿದ್ದಾರೆಂದು ವದಂತಿ ಹಬ್ಬಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿರುವ ಗಂಭೀರ ಪ್ರಕರಣವನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಇಂದು ಸದನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ಇದಕ್ಕೆ ಉತ್ತರವಾಗಿ ರಾಜ್ಯ ಗೃಹ ಸಚಿವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣದ ಬಗ್ಗೆ ವದಂತಿಗಳು ಹುಟ್ಟಿದ್ದು, ಇಂತಹ ವದಂತಿಗಳ ಬಗ್ಗೆ ದಕ ಜಿಲ್ಲೆ ಮತ್ತು ಮಂಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ಯಾವುದೇ ಮಕ್ಕಳ ಅಪಹರಣಕ್ಕೊಳಗಾಗಿರುವ ಪ್ರಕರಣ ದಾಖಲಾಗಿರುವುದಿಲ್ಲ ಹಾಗೂ ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲವೆಂದು ಸ್ಪಷ್ಟೀಕರಣ ನೀಡಿರುತ್ತಾರೆ. ದಕ ಜಿಲ್ಲೆ ಮತ್ತು ಮಂಗಳೂರು ನಗರದಲ್ಲಿ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸುತ್ತಿದ್ದು, ಜಿಲ್ಲೆಯ ಹಾಗೂ ನಗರದ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಾಗೃತಗೊಳಿಸುವುದರ ಜೊತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಹಾಗೂ ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ಗೃಹ ಸಚಿವರು ಲಿಖಿತ ಉತ್ತರವನ್ನು ನೀಡಿರುತ್ತಾರೆ.