ನಾರಾಯಣ ಗುರುಗಳು ಶಾಂತಿ ಸಂದೇಶ ನೀಡಿದ ದಾರ್ಶನಿಕರು; ಕೋಟ ಶ್ರೀನಿವಾಸ ಪೂಜಾರಿ
ಉಡುಪಿ : ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟುಗೂಡಿಸಿ ಶಾಂತಿ ಸಂದೇಶ ನೀಡಿದ ಜಗತ್ತಿನ ಪ್ರಥಮ ದಾರ್ಶನಿಕರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಸೋಮವಾರ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಜಿಲ್ಲಾ ಬಿಲ್ಲವ ಸಮುದಾಯ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾರಾಯಣಗುರುಗಳು ಒಂದೇ ಜಾತಿ, ಒಂದೆ ಮತ, ಒಂದೇ ದೇವರು ಎಂಬ ಸಂದೇಶ ನೀಡಿದ್ದು, ಇವರ ಆಶ್ರಮಕ್ಕೆ ಭೇಟಿ ನೀಡಿದ್ದ ಮಹಾತ್ಮ ಗಾಂಧೀ ಅವರು ಅಲ್ಲಿನ ಪರಿಸರ ಕಂಡು ಪ್ರಭಾವಿತರಾಗಿದ್ದರು, ನಾರಾಯಣಗುರುಗಳು ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದ ಕೋಟಾ ಶ್ರೀನಿವಾಸ ಪೂಜಾರಿ, ಶಿಕ್ಷಣದಿಂದ ಉನ್ನತಿ ಪಡೆಯಬೇಕು ಹಾಗೂ ಸಂಘಟನೆಯಿಂದ ಶಕ್ತಿ ಪಡೆಯಬೇಕು ಎನ್ನುವ ಅವರ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಮೌಡ್ಯ ತುಂಬಿದ್ದ ಸಮಾಜದಲ್ಲಿ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಚಳುವಳಿಯ ಮೂಲಕ ಅನಿಷ್ಠ ಪದ್ದತಿಗಳನ್ನು ಕೊನೆಗಾಣಿಸಿದ ನಾರಾಯಣಗುರುಗಳ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶಿಯಾಗಬೇಕು ಎಂದು ಹೇಳಿದರು.
ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ , ಆದರ್ಶದ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ತೋನ್ಸೆ, ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಎಎಸ್ಪಿ ಕುಮಾರ ಚಂದ್ರ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಅಶೋಕ್ ಎಂ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಕೆ.ಎಸ್.ಓ.ಯು ನ ಪ್ರಾದೇಶಿಕ ನಿರ್ದೇಶಕ ಡಾ. ಕೆ.ಪಿ. ಮಹಾಲಿಂಗು ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ಸ್ವಾಗತಿಸಿದರು.