ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ
ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ರಾಜ್ಯ ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎ.ಬಿ. ಇಬ್ರಾಹೀಂ ಅವರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು.
ಬಳಿಕ ಮಾತನಾಡಿದ ಅವರು ಎಲೆಮರೆ ಕಾಯಿಯಂತಿದ್ದ ಹಾಜಬ್ಬ ಅವರ ನಿಸ್ವಾರ್ಥ ಸೇವೆಯನ್ನು ಕೇಂದ್ರ ಸರಕಾರ ಗುರುತಿಸಿರುವುದು ಶ್ಲಾಘನೀಯ. ಹಾಜಬ್ಬರಿಗೆ ಈ ಪ್ರಶಸ್ತಿ ಲಭಿಸಿರುವುದು ಜಿಲ್ಲೆಗೆ ಸಂದ ಗೌರವ ಮತ್ತು ಹೆಮ್ಮೆಯ ವಿಚಾರವಾಗಿದೆ ಎಂದರು.
ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಶಿಕ್ಷಣಕ್ಕಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟಿರುವ ಹಾಜಬ್ಬರು ಪದವಿಪೂರ್ವ ಕಾಲೇಜು ಮತ್ತು ಒಂದನೆ ತರಗತಿಯಿಂದಲೇ ಆಂಗ್ಲಮಾಧ್ಯಮ ಆರಂಭಿಸಲು ಬಹುಕಾಲದಿಂದ ಬೇಡಿಕೆ ಸಲ್ಲಿಸುತ್ತಿದ್ದರು. ಆ ಪೈಕಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆಂಗ್ಲಮಾಧ್ಯಮ ಆರಂಭಿಸುವ ಬಗ್ಗೆ ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯ ಜೊತೆ ಚರ್ಚಿಸಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇನ್ನು ಪದವಿಪೂರ್ವ ಕಾಲೇಜು ಆರಂಭಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸರಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಎಬಿ ಇಬ್ರಾಹೀಂ ನುಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಹರೇಕಳ ಹಾಜಬ್ಬ 2015ರಲ್ಲಿ ಎಬಿ ಇಬ್ರಾಹೀಂ ಜಿಲ್ಲಾಧಿಕಾರಿಯಾಗಿದ್ದಾಗ ನನ್ನ ಹೆಸರನ್ನು ಈ ಪ್ರಶಸ್ತಿಗೆ ಶಿಫಾರಸು ಮಾಡಿದ್ದರು. ಆದರೆ ನಾನು ಪ್ರಶಸ್ತಿಯನ್ನು ನಿರೀಕ್ಷೆ ಮಾಡಿದವನಲ್ಲ. ನಿಮ್ಮೆಲ್ಲರ ಸಹಕಾರದಿಂದ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂದರು.
ಈ ಸಂದರ್ಭ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ವಾರ್ತಾಧಿಕಾರಿ ಖಾದರ್ ಶಾ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಉಸ್ಮಾನ್, ವಕ್ಫ್ ಅಧಿಕಾರಿ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.