ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ, ತರಬೇತಿಗೆ 10 ಕೋಟಿ- ಪ್ರಮೋದ್ ಮಧ್ವರಾಜ್
ಉಡುಪಿ: ರಾಜ್ಯದಲ್ಲಿನ ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ , ಅವರಿಗೆ ಅಗತ್ಯ ತರಬೇತಿ ನೀಡಲು ರಾಜ್ಯ ಸರ್ಕಾರ 10 ಕೋಟಿ ರೂ ಗಳನ್ನು ಬಿಡುಗಡೆ ಮಾಡಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಅವರು ಭಾನುವಾರ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ತಾಲೂಕು ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ , ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ , ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದ್ದು, ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಅಗತ್ಯ ತರಬೇತಿ ಮತ್ತು ನೆರವು ನೀಡಲಾಗುತ್ತಿದೆ, ಸಹಸ್ರ ಕ್ರೀಡಾ ಪ್ರತಿಭಾ ಯೋಜನೆಯಡಿ , 19 ವರ್ಷದೊಳಗಿನ ಪ್ರತಿಭಾವಂತ 750 ಹಾಗೂ 19 ವರ್ಷ ಮೇಲ್ಪಟ್ಟ ಪ್ರತಿಭಾವಂತ 250 ಕ್ರೀಡಾಪಟುಗಳು ಸೇರಿದಂತೆ ಒಟ್ಟು 1000 ಕ್ರೀಡಾ ಪಟುಗಳ ಆಯ್ಕಗೆ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುತ್ತಿದೆ, ಕ್ರೀಡಾಪಟುಗಳು ಸತತ ಪರಿಶ್ರಮದ ಮೂಲಕ ಕ್ರೀಡೆಯಲ್ಲಿ ಸಾಧನೆ ತೋರಬೇಕು, ಪ್ರತಿನಿತ್ಯ ಕನಿಷ್ಠ 8 ಗಂಟೆಗಳ ಶ್ರಮ ತೋರಿದರೆ ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ನಂ.1 ಸಾಧನೆ ತೋರಬಹುದು, ರಾಜ್ಯದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಪದಕ ಪಡೆಯುವ ಗುರಿ ಹೊಂದಿರಬೇಕು, ಇದಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಸಚಿವರು ಹೇಳಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ನಗರಸಭಾ ಸದಸ್ಯ ಯಶ್ ಪಾಲ್ ಸುವರ್ಣ,ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರೆ , ಕ್ರೀಡಾ ಇಲಾಖೆಯ ನಾರಾಯಣ ರಾವ್ ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.