Home Mangalorean News Kannada News ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ – ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಎಚ್ಚರಿಕೆ 

ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ – ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಎಚ್ಚರಿಕೆ 

Spread the love
RedditLinkedinYoutubeEmailFacebook MessengerTelegramWhatsapp

ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ – ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಎಚ್ಚರಿಕೆ 

ಮಂಗಳೂರು: ಮಕ್ಕಳು ನಿಗದಿತ ಪ್ರಾಯ ತಲುಪುವ ಮೊದಲು ಅವರಿಗೆ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಸೂಚಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದರೆ, ಮಕ್ಕಳ ಪಾಲಕರು, ಮದುವೆ ಹಾಲ್ ಅಥವಾ ಕಲ್ಯಾಣ ಮಂಟಪಗಳ ಮುಖ್ಯಸ್ಥರು, ಆಹ್ವಾನ ಪತ್ರಿಕೆ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್, ಮದುವೆಯ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡ ಧಾರ್ಮಿಕ ವ್ಯಕ್ತಿಗಳ ವಿರುದ್ಧವೂ ಕೇಸು ದಾಖಲಿಸಲಾಗುವುದು ಎಂದು ಅವರು ಎಚ್ಚರಿಸಿದರು. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಬಾರದು. ಇಂತಹ ಮಾಹಿತಿ ಬಂದರೆ, ಕೂಡಲೇ ಅದನ್ನು ತಡೆಗಟ್ಟಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ವಿಧವೆಯರು ಪಿಂಚಣಿ ವಂಚಿತರಾಗಬಾರದು, ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಜಿಲ್ಲೆಯ ಪ್ರತೀ ಅಂಗನವಾಡಿ ಕಾರ್ಯಕರ್ತೆಯರಿಂದ ಮಾಹಿತಿ ಪಡೆದು ಕೂಡಲೇ ವರದಿ ನೀಡಬೇಕು ಸರ್ಕಾರದಿಂದ ಪೂರೈಕೆ ಮಾಡಲಾದ ಸ್ಯಾನಿಟರಿ ಪ್ಯಾಡ್‍ಗಳನ್ನು ಎಲ್ಲಾ ಶಾಲಾ ಹೆಣ್ಣು ಮಕ್ಕಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಿತರಿಸಿ ಅದರ ಮಾಹಿತಿಯನ್ನು ನೀಡಬೇಕು. ಜೊತೆಗೆ ಬಳಕೆಯಾದ ನಂತರ ಬಿಸಾಡಲು ಇರುವ ತ್ಯಾಜ್ಯ ಸಂಗ್ರಹಣಾ ತೊಟ್ಟಿ, ಮತ್ತು ಸುಡುವಿಕೆ ಯಂತ್ರ ಸರಿಯಾಗಿದೆಯೇ ಎಂದು ಪರಿಶೀಲಿಸಬೇಕು ಎಂದರು.

ಬಂಟ್ವಾಳ, ಬೆಳ್ತಂಗಡಿ ತಾಲೂಕಿನಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಮಾಹಿತಿ ಗಮನಕ್ಕೆ ಬಂದಿದೆ. ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರಿಂದ ಆಯಾ ವ್ಯಾಪ್ತಿಯಲ್ಲಿ ಮಾಹಿತಿ ಪಡೆದುಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕೇಸು ದಾಖಲಿಸಬೆಕು ಎಂದು ತಿಳಿಸಿದರು.

ಹೆಣ್ಣು ಮಕ್ಕಳು ಋತುಸ್ರಾವದ ಸಮಯದಲ್ಲಿ ಶುಚಿತ್ವ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಗೂ ಶುಚಿತ್ವವಿಲ್ಲದ ಅಭ್ಯಾಸಗಳಿಂದ ಉಂಟಾಗುವ ಸೋಂಕುಗಳಿಂದ ಶಾಲೆಗೆ ಗೈರಾಗುವುದನ್ನು ತಪ್ಪಿಸಲು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ವರ್ಷ ಶಾಲಾ ಕಾಲೇಜು ಪ್ರಾರಂಭವಾಗುವ ಮೊದಲು ಶಿಶು ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಗುಡ್ಡ ಗಾಡು ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರ, ಶಾಲಾ ಕಾಲೇಜು, ವಸತಿ ನಿಲಯಗಳಲ್ಲ್ಲಿ ಸರಿಯಾದ ಕಂಪೌಡ್, ಶೌಚಾಲಯ, ಹೆಣ್ಣು ಮಕ್ಕಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇನ್ನಿತರ ಸೌಕರ್ಯಗಳು ಇದೆಯೇ ಎಂದು ಪರಿಶೀಲಿಸಿ ಮಾಹಿತಿ ನೀಡಬೇಕು ಎಂದರು.

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೌಲಭ್ಯ, ಪೋಲೀಸ್ ನೆರವು, ಆಪ್ತ ಸಮಾಲೋಚನೆ, ಕಾನೂನು ನೆರವು ಹಾಗೂ ತಾತ್ಕಾಲಿಕ ಆಶ್ರಯ ನೀಡಲು 24*7 ಕಾರ್ಯನಿರ್ವಹಿಸುವ ಘಟಕವನ್ನು ಜಿಲ್ಲಾ ಲೇಡಿಗೋಶನ್ ಆಸ್ಪತ್ರೆಯಲ್ಲಿ ‘ಸಖಿ’ ಸೆಂಟರ್ ಪ್ರಾರಂಭಿಸಲಾಗಿದ್ದು, ಸಖಿ ಸೆಂಟರ್ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.

2019-20 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ 34 ವಿದ್ಯಾರ್ಥಿನಿಯರಿಗೆ ತಲಾ ರೂ 5,000 ಪ್ರೋತ್ಸಾಹಧನ ನೀಡಲಾಗುತ್ತಿದೆ. 2019-20 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿ ಎಲ್ಲಾ ವಿದ್ಯಾರ್ಥಿನಿಯರು ಪಿಯುಸಿ ವಿದ್ಯಾಭ್ಯಾಸ ಮುಂದುವರಿಸಿರುವ 34 ಪ್ರೌಢಶಾಲೆಗಳಿಗೆ ರೂ. 5,000 ಪ್ರ್ರೇತ್ಸಾಹಧನ ನೀಡಲಾಗುತ್ತಿದೆ. ಗರಿಷ್ಠ ಹೆಣ್ಣು ಮಕ್ಕಳು ಜನಿಸಿದ ಜಿಲ್ಲೆಯ 5 ಗ್ರಾಮ ಪಂಚಾಯತ್‍ಗಳಿಗೆ ತಲಾ ರೂ 5,000 ಪ್ರೋತ್ಸಾಹಧನ ನೀಡಲಾಗುತ್ತಿದೆ. ಮಹಿಳಾ ಶಕ್ತಿ ಕೇಂದ್ರದ ಮೂಲಕ ಗೊಂಚಲು ಕಾರ್ಯಕ್ರಮ ಹಾಗೂ ಇನ್ನಿತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಬೇರೆ ಬೇರೆ ರಾಜ್ಯದ ಮಕ್ಕಳು ಬಾಲಕಾರ್ಮಿಕರಾಗಿ ವಿವಿಧ ಕೆಲಸಗಳಲ್ಲಿ ದುಡಿಯುತ್ತಿದ್ದಾರೆ ಇದನ್ನು ತಡೆಯಬೇಕು ಜೊತೆಗೆ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ದತ್ತು ಮಕ್ಕಳನ್ನು ಪಡೆದುಕೊಳ್ಳುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೆನ್ನಿ ಡಿಸೋಜಾ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪಾ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

Exit mobile version