ಬಾಲ್ಯ ವಿವಾಹ ನಿಷೇಧ ಕಾಯ್ದೆ : ಅರಿವು ಕಾರ್ಯಕ್ರಮ
ಮಂಗಳೂರು : ಸರಕಾರಿ ನೌಕರರ ಸಭಾಭವನ ಮಂಗಳೂರು, ಇಲ್ಲಿ ಡಿಸೆಂಬರ್ 19 ರಂದು ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವತಿಯಿಂದ ಸಾಮೂಹಿಕ ವಿವಾಹ ಆಯೋಜಕರು, ಕಲ್ಯಾಣ ಮಂಟಪಗಳ ವ್ಯವಸ್ಥಾಪಕರು, ಧಾರ್ಮಿಕ ಮುಖಂಡರು, ಪೂಜಾರಿಗಳು, ಹಾಗೂ ಪ್ರಿಂಟಿಂಗ್ ಪ್ರೆಸ್ ಮಾಲೀಕರಿಗೆ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಕಾರ್ಯಕ್ರಮ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಜರುಗಿತು.
ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ನಮ್ಮ ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯಬಾರದು, ಈ ನಿಟ್ಟಿನಲ್ಲಿ ಮದುವೆ ಆಯೋಜಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಂಡಿರುವುದು ಒಂದು ಉತ್ತಮ ಬೆಳವಣಿಗೆ ಎಂದರು. ಮದುವೆ ಆಯೋಜಕರಾದ ಕಲ್ಯಾಣ ಮಂಟಪಗಳ ವ್ಯವಸ್ಥಾಪಕರು, ಧಾರ್ಮಿಕ ಮುಖಂಡರು, ಪೂಜಾರಿಗಳು, ಪ್ರಿಂಟಿಂಗ್ ಪ್ರೆಸ್ ಮಾಲಿಕರು ಜಾಗೃತರಾದರೆ ಯಾವುದೇ ಬಾಲ್ಯವಿವಾಹ ನಡೆಯಲು ಸಾಧ್ಯವಿಲ್ಲ. ನೀವೆಲ್ಲರೂ ಸಮಾಜಮುಖಿಯಾಗಿ ಕೆಲಸಮಾಡಿ ಬಾಲ್ಯವಿವಾಹ ತಡೆಗಟ್ಟುವಲ್ಲಿ ಇಲಾಖೆಯೊಂದಿಗೆ ಕೈಜೋಡಿಸಿ ಎಂದು ಶುಭ ಹಾರೈಸಿದರು.
ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ನಮ್ಮ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಬರಲೇಬಾರದು, ಬುದ್ಧಿವಂತರ ಜಿಲ್ಲೆಯಾಗಿದ್ದರೂ ಕೂಡ ಕೆಲವೊಂದು ಬಾಲ್ಯವಿವಾಹ ಪ್ರಕರಣಗಳು ಕಂಡುಬರುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಮದುವೆ ಆಯೋಜಕರೇ ಎಚ್ಚೆತ್ತುಕೊಂಡಾಗ ಯಾವುದೇ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದರು.
ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಘು ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಗ್ರಾಮ ಮಟ್ಟದಲ್ಲಿ ಕೂಡ ಜಾಗೃತರಾಗುವಂತೆ ಬಾಲ್ಯವಿವಾಹ ನಿಷೇಧಾಧಿಕಾರಿಗಳಾದ ಪಿ.ಡಿ.ಓ ರವರಿಗೂ ಮಾಹಿತಿ ನೀಡುವುದಾಗಿ ತಿಳಿಸಿದರು. ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ಯಾಮಲಾ ಸಿ.ಕೆ ಕಾರ್ಯಕ್ರಮದ ಬಗ್ಗೆ ಪ್ರಾಸ್ತವಿಕ ಮಾತನಾಡಿ ನಮ್ಮ ತಾಲೂಕಿನಲ್ಲಿ ತಡೆಗಟ್ಟಿದ ಕೆಲವೊಂದು ಬಾಲ್ಯವಿವಾಹ ಪ್ರಕರಣಗಳ ಉದಾಹರಣೆಯೊಂದಿಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿರುವ ಹಿರಿಯ ಉಪನೋಂದಣಾಧಿಕಾರಿ ಕವಿತಾ, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ನಿಕೇಶ್ ಶೆಟ್ಟಿ , ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ವಝೀರ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಲ್ಪನಾ, ಗಾನಮಣಿ, ಶಾಲಿನಿ, ಶಂಕರಿ ಉಪಸ್ಥಿತರಿದ್ದರು. ಮೇಲ್ವಿಚಾರಕಿ ನಾಗರತ್ನ ಕಾರ್ಯಕ್ರಮ ನಿರೂಪಿಸಿದರು. ಮಾಲಿನಿ ವಂದಿಸಿದರು.