ಮಂಗಳೂರು: ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ
ಮಂಗಳೂರು: : 2020ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲೀಷ್ ಭಾಷೆಯ ಪರೀಕ್ಷೆಯನ್ನು ಕೊರೊನಾ ಸಾಂಕ್ರಾಮಿಕ ರೊಗದಿಂದಾಗಿ ಮುಂದೂಡಲಾಗಿತ್ತು. ಈ ಪರೀಕ್ಷೆಯನ್ನು ಜೂನ್ 18 ರಂದು ನಡೆಸಲು ಸರ್ಕಾರ ತೀರ್ಮಾನಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸೂಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 18 ರಂದು ಎಲ್ಲಾ 51 ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧೂ ರೂಪೇಶ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಬಂಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಬಂಧಿಸಲಾಗಿದೆ. ನಿಬಂಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಸಿದ ಯಾವುದೇ ವಿಷಯಗಳನ್ನು /ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ನಿಷೇಧಾಜ್ಷೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.