ಮ0ಗಳೂರು: ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು (Shelter Homes), ತೆರೆದ ತಂಗುದಾಣಗಳು ನಿರ್ಗತಿಕ ಮಕ್ಕಳ ಕುಠೀರ, ಬಾಲಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಅರ್ಹ ಸಂಸ್ಥೆಗಳು, (ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತುಪಡಿಸಿ) ಎಲ್ಲಾ ರೀತಿಯ ಮಕ್ಕಳ ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳನ್ನು ಬಾಲನ್ಯಾಯ ಕಾಯ್ದೆ 2000, ತಿದ್ದುಪಡಿ ಕಾಯ್ದೆ 2006 ರನ್ವಯ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.
ಆದರೆ ಈ ಕಾಯ್ದೆಯಡಿ ನೋಂದಣಿಯಾಗದೇ, ಮಕ್ಕಳಿಗಾಗಿ ಸಂಸ್ಥೆಗಳನ್ನು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸರ್ವೋಚ್ಛ ನ್ಯಾಯಾಲಯವು “ ಬಚ್ಪನ್ ಬಚಾವೋ” ಆಂದೋಲನದ ಅಂಗವಾಗಿ ಸಲ್ಲಿಸಿದ ರಿಟ್ ಅರ್ಜಿ (ಸಿವಿಲ್) ಸಂಖ್ಯೆ:75/2012ಗೆ ಸಂಬಂಧಪಟ್ಟಂತೆ ದಿ.10.05.2013 ರಂದು ನೀಡಿರುವ ನಿರ್ದೇಶನದಂತೆ ಮಕ್ಕಳಿಗೆ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳು ಮಕ್ಕಳ ಕಲ್ಯಾಣ ಸಮಿತಿಯ ಮುಖಾಂತರ ಮಾತ್ರ ಮಕ್ಕಳನ್ನು ರಕ್ಷಣೆಗೆ ದಾಖಲು ಮಾಡಬೇಕಿದ್ದು ನೇರವಾಗಿ ಪಡೆಯಲು ಅರ್ಹತೆ ಇಲ್ಲವೆಂದು ಸ್ಪಷ್ಟಪಡಿಸಿರುತ್ತಾರೆ. ಹಾಗೂ ಈ ರೀತಿಯ ಸಂಸ್ಥೆಗಳು ಬಾಲನ್ಯಾಯ ಕಾಯ್ದೆ 2000 ರಡಿಯಲ್ಲಿ ಕಡ್ಡಾಯವಾಗಿ ನೋಂದಣಿಯಾಗಿ ಕಾರ್ಯನಿರ್ವಹಿಸಬೇಕೆಂದು ಸ್ಪಷ್ಟವಾಗಿ ನಿರ್ದೇಶನ ಇರುವುದಾಗಿದೆ.
ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಬಾಲನ್ಯಾಯ ಕಾಯ್ದೆಯಡಿ 2000 ರಡಿ ಇದುವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಒಂದು ತಿಂಗಳೊಳಗೆ ನೋಂದಣೆಗೆ ಪ್ರಸ್ತಾವನೆಯನ್ನು ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ. ಈಗಾಗಲೇ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿದ್ದ ಸಂಸ್ಥೆಗಳು ನೋಂದಣಿ ಅವಧಿ ಮುಗಿದಿದ್ದಲ್ಲಿ ಕೂಡಲೇ ನವೀಕರಣಕ್ಕೆ ಪ್ರಸ್ತಾವನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸಲ್ಲಿಸತಕ್ಕದ್ದು. ತಪ್ಪಿದ್ದಲ್ಲಿ ಭಾರತೀಯ ದಂಡ ಸಂಹಿತೆ ವಿಧಿ 340 ರಡಿಯಲ್ಲಿ ಅಕ್ರಮ ಬಂಧನವೆಂದು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಾಗೂ ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಣಿಯಾಗಿದ್ದರೂ ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಮುಂದುವರೆದು ಒಂದು ವೇಳೆ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಫಿಸಿದ್ದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು. ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.