ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ ಈಡಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪತ್ನಿಗೆ ಪ್ರಾಧಿಕಾರದಿಂದ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಲೋಕಾಯುಕ್ತರ ಆದೇಶದನ್ವಯ ಸಲ್ಲಿಸಿದ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ(ಈಡಿ)ವು ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ತಿಳಿದು ಬಂದಿದೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ವಾರ ಆದೇಶ ನೀಡಿತ್ತು. ನಂತರ ಎಫ್‌ಐಆರ್ ದಾಖಲಿಸಲಾಗಿತ್ತು.