Home Mangalorean News Kannada News ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ

Spread the love

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ  ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ   ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶವನ್ನೂ ಹೊರಡಿಸಿದ್ದಾರೆ.

ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.

ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದೂ ಯಡಿಯೂರಪ್ಪ ಹೇಳಿದ್ದಾರೆ.

ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ. ಈ ಮಧ್ಯೆ, ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದೂ ಗೃಹ ಸಚಿವರು ಹೇಳಿದ್ದಾರೆ.


Spread the love

Exit mobile version