ವಿಜಯ ಬ್ಯಾಂಕ್ ವಿಲೀನ ವಿರೋಧಿಸಿ ಕೇಂದ್ರಕ್ಕೆ ಸರ್ವಪಕ್ಷಗಳ ಜನಪ್ರತಿನಿಧಿಗಳ ನಿಯೋಗ
ಮಂಗಳೂರು : ಲಾಭದಲ್ಲಿರುವ ಮಂಗಳೂರು ಮೂಲದ ವಿಜಯ ಬ್ಯಾಂಕನ್ನು ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸಲು ಮುಂದಾದ ಕೇಂದ್ರ ಸರಕಾರವು ತನ್ನ ನಿರ್ಧಾರವನ್ನು ಬದಲಾಯಿಸಬೇಕು ಎಂದು ಕೋರಲು ಕೇಂದ್ರಕ್ಕೆ ಸರ್ವಪಕ್ಷಗಳ ಜನಪ್ರತಿನಿಧಿಗಳ ನಿಯೋಗ ತೆರಳಲು ನಿರ್ಧಾರ ಕೈಗೊಳ್ಳಲಾಗಿದೆ.
ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪ್ಪಾಡಿ ನೇತೃತ್ವದ ‘ವಿಜಯಾ ಬ್ಯಾಂಕ್ ಉಳಿಸಿ ಹೋರಾಟ ಸಮಿತಿ’ಯು ದ.ಕ. ಮತ್ತು ಉಡುಪಿ ಜಿಲ್ಲೆಯ ಸರ್ವಪಕ್ಷಗಳ ಜನಪ್ರತಿನಿಧಿಗಳು ತನ್ನ ‘ನಿಲುವು’ಗಳನ್ನು ವ್ಯಕ್ತಪಡಿಸುವುದಕ್ಕಾಗಿ ಶನಿವಾರ ನಗರದ ಪುರಭವನದಲ್ಲಿ ಏರ್ಪಡಿಸಿದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಭಾಸ್ಕರ ಕೆ., ಮಾಜಿ ಸಚಿವ ಬಿ.ರಮಾನಾಥ ರೈ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ಗಣೇಶ್, ಸಿಪಿಎಂ ಮುಖಂಡರಾದ ಯಾದವ ಶೆಟ್ಟಿ, ಬಾಲಕೃಷ್ಣ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಮತ್ತಿತರರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಕೊಲ್ಲಾಡಿ ಬಾಲಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.