ಶಾಲಾ ಮಕ್ಕಳ ಸುರಕ್ಷತೆಗೆ ಕ್ರಮ- ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ : ಶಾಲಾ ಮಕ್ಕಳನ್ನು ವಾಹನಗಳಲ್ಲಿ ಶಾಲೆಗೆ ಕರೆತರುವ ಕುರಿತಂತೆ ಜಿಲ್ಲೆಯ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಕ್ಕಳ ಸುರಕ್ಷತೆ ಕುರಿತು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಯುವಜನ ಸೇವೆ ಮತ್ತು ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಅವರು ಮಂಗಳವಾರ ಕುಂದಾಪುರ ತಾಲೂಕಿನ ಮೋವಾಡಿ ಕ್ರಾಸ್ ಬಳಿ ಜರುಗಿದ ಅಪಘಾತದಿಂದ , ಮಣಿಪಾಲ ಮತ್ತು ಕುಂದಾಪುರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳ ಯೋಗಕ್ಷೇಮ ವಿಚಾರಿಸಿ , ನಂತರ ಮೃತಪಟ್ಟ ಶಾಲಾ ಮಕ್ಕಳ ಮನೆಗಳಿಗೆ , ಅಪಘಾತ ನಡೆದ ಸ್ಥಳಕ್ಕೆ ಮತ್ತು ಶಾಲೆಗೆ ಬುಧವಾರ ಭೇಟಿ ನೀಡಿ ಮಾತನಾಡಿದರು.
ಇದೊಂದು ಅತ್ಯಂತ ದೊಡ್ಡ ದುರ್ಘಟನೆಯಾಗಿದ್ದು, ಇದಕ್ಕಾಗಿ ರಾಜ್ಯದ ಮುಖ್ಯಮಂತ್ರಿಗಳೂ ಸಹ ಸಂತಾಪ ವ್ಯಕ್ತಪಡಿಸಿದ್ದು, ಮಕ್ಕಳ ಕುಟುಂಬ ವರ್ಗಕ್ಕೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದರು.
ಮಹಿಳ ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಅವರು ಸಹ ಸಂತಪ ಸೂಚಿಸಿದ್ದು, ಮಕ್ಕಳನ್ನು ವಾಹನಗಳಲ್ಲಿ ಮಿತಿಮೀರಿ ತುಂಬಿಕೊಂಡು ಕಾನೂನುಬಾಹಿರ ಕ್ರಮವಾಗಿದ್ದು, ಅಸಮಧಾನ ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ಹೇಳಿದರು.
ರಸ್ತೆ ಸುರಕ್ಷತಾ ಸಭೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ಯುವ ಜನತೆ ಮತ್ತು ಸಂಘ ಸಂಸ್ಥೆಗಳು ಖಾಸಗಿ ವಾಹನಗಳಲ್ಲಿ ಮಕ್ಕಳನ್ನು ಮಿತಿಮೀರಿ ಹಾಕುವುದರ ಕುರಿತು ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುವ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದ ಅವರು ಇಂತಹ ಪ್ರಕರಣಗಳಲ್ಲಿ ಮೃತ ಮಕ್ಕಳ ಕುಟುಂಬ ವರ್ಗಕ್ಕೆ ಅಗತ್ಯ ಪರಿಹಾರ ನೀಡುವ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಚರ್ಚಿಸಲಾಗಿದೆ ಎಂದು ಸಚಿವರು ಹೇಳಿದರು.
ಸಚಿವರೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷೆ ವೆರೊನಿಕಾ ಕರ್ನೆಲಿಯೋ, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಪಾಧ್ಯಕ್ಷೆ ಸಂಧ್ಯಾ, ಉಡುಪಿ ತಾ.ಪಂ. ಆಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿ.ಪಂ. ಸದಸ್ಯ ಜನಾರ್ಧನ ತೋನ್ಸೆ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.