ಸಾರ್ವಜನಿಕ ರಸ್ತೆ ಬದಿಯಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ – ಜಿಲ್ಲಾಧಿಕಾರಿ ಜಿ ಜಗದೀಶ್

Spread the love

ಸಾರ್ವಜನಿಕ ರಸ್ತೆ ಬದಿಯಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ – ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ :  ಸರ್ವೋಚ್ಛ ನ್ಯಾಯಾಲಯದ ಆದೇಶದ ಅನ್ವಯ ಸೆಪ್ಟಂಬರ್ 29 2009 ರ ಬಳಿಕ ಸಾರ್ವಜನಿಕ ರಸ್ತೆಗಳಲ್ಲಿ, ಸಾರ್ವಜನಿಕ ಉದ್ಯಾನಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳು ಹಾಗೂ ಅದಕ್ಕೆ ಸಂಬಂಧಪಟ್ಟ ವಾಣಿಜ್ಯ ಸಂಕೀರ್ಣಗಳ ಸರ್ವೇ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕ ರಸ್ತೆಗಳಲ್ಲಿ, ಸಾರ್ವಜನಿಕ ಉದ್ಯಾನಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ ನಡೆಸಿ ಮಾಹಿತಿ ಸಂಗ್ರಹಿಸುವಂತೆ ಮಾನ್ಯ ಸರ್ವೋಚ್ಛ ನ್ಯಾಯಾಲಯ ಸೂಚಿಸಿದ್ದು, ಜನವರಿ 1 ರಿಂದ ಗ್ರಾಮ ಲೆಕ್ಕಾಧಿಕಾರಿಗಳು ಮಾಹಿತಿಯನ್ನು ಸಂಗ್ರಹಿಸಲಿದ್ದು, ಪೆಬ್ರವರಿ 1 ರಿಂದ 28 ರ ವರೆಗೆ ತಹಸೀಲ್ದಾರ್, ಮಹಾನಗರ ಪಾಲಿಕೆ ಆಯುಕ್ತರು ಮಾಹಿತಿಯನ್ನು ಸಂಗ್ರಹಿಸಿ, ಕ್ರೂಢೀಕರಿಸಲಿದ್ದಾರೆ. ಮಾಚ್ 15 ರೊಳಗೆ ಜಿಲ್ಲಾಧಿಕಾರಿಗಳು ಮಾಹಿತಿಯನ್ನು ಪರಿಶೀಲಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಈ ಸರ್ವೇ ಕಾರ್ಯದ ಸಂದರ್ಭದಲ್ಲಿ ಸಾರ್ವಜನಿಕರು, ಸಾರ್ವಜನಿಕ ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕಟ್ಟಡಗಳು ಸ್ಥಾಪನೆಯಾಗಿರುವ ಕುರಿತು ಮಾಹಿತಿ ನೀಡಬಹುದಾಗಿದ್ದು, ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಸಾರ್ವಜನಿಕರು ಮಾಹಿತಿ ನೀಡಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಶುಲ್ಕ ರಹಿತ ದೂರವಾಣಿ ಸಂಖ್ಯೆ 1077 ಅಥವಾ 0820-2574924 ನ್ನು ಸಂಪರ್ಕಿಸುಬಹುದು. ಹಾಗೂ ಸಹಾಯಕ ಕಮೀಷನರ್ ಕಚೇರಿ ಮತ್ತು ಸಂಬಂಧಪಟ್ಟ ತಾಲೂಕು ಕಚೇರಿಗಳಲ್ಲಿ ಲಿಖಿತರೂಪದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.


Spread the love