ಸಿಸಿಬಿ ಕಾರ್ಯಾಚರಣೆ: ಗಾಂಜಾ ಮಾರಾಟ ಆರೋಪದಲ್ಲಿ ಇಬ್ಬರ ಸೆರೆ
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ.
ಬಂಧಿತರನ್ನು ನಾಟೆಕಲ್ ನಿವಾಸಿ ಹನೀಫ್ (32), ಮಂಜೇಶ್ವರ ನಿವಾಸಿ ಶಫೀಕ್ (29) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿ ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಗಳಿಸಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿದ ಆರೋಪಿಗಳನ್ನು
ಮಂಗಳೂರು ನಗರದ ನೆಹರೂ ಮೈದಾನದ ಬಳಿಯ ಪುಟ್ಬಾಲ್ ಮೈದಾನದ ಪರಿಸರದಿಂದ ವಶಕ್ಕೆ ಪಡೆದುಕೊಂಡು ಆರೋಪಿಗಳಿಂದ ಒಟ್ಟು ರೂ. 21,000/- ಮೌಲ್ಯದ 525 ಗ್ರಾಂ ನಿಷೇಧಿತ ಮಾದಕವಾದ ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲದೇ 2 ಮೊಬೈಲ್ ಫೋನ್ ಗಳು, ನಗದು ರೂ. 2000/- ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 33,000/- ಆಗಿರುತ್ತದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಹನೀಫ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ, ಕೊಣಾಜೆ ಪೊಲೀಸ್, ಮಂಗಳೂರು ದಕ್ಷಿಣ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು.
ಮಾನ್ಯ ಪೊಲೀಸ್ ಆಯುಕ್ತರಾದ ಡಾ. ಪಿ.ಎಸ್. ಹರ್ಷ, ಐ.ಪಿ.ಎಸ್, ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.