ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿತನ ಬಂಧನ
ಮಂಗಳೂರು: ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿಯಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿರುತ್ತಾರೆ. ಆರೋಪಿತನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು. ಆರೋಪಿತನಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ.
ಬಂಧಿತ ಆರೋಪಿಯನ್ನು ಮಂಗಳೂರು ಶಿವನಗರ ನಿವಾಸಿ ಮೊಹಮ್ಮದ್ ರಿಜ್ವಾನ್ (34) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಯಿಂದ 15 ಗ್ರಾಂ MDMA ಮಾದಕ ವಸ್ತು-(75,000/-), ONEPLUS ಕಂಪನಿಯ ಮೊಬೈಲ್ ಫೋನ್ -1 (15,000/-), ಡಿಜಿಟಲ್ ತೂಕ ಮಾಪನ -1, ನಗದು ಹಣ-1,280/- ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 91,280/- ರೂ ಆಗಬಹುದು.
ಈತನ ಮೇಲೆ ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಪೊಲೀಸ್ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿರುತ್ತವೆ.
ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ರವರ ನೇತೃತ್ವದಲ್ಲಿ ಈ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.