ಸೆಪ್ಟೆಂಬರ್ 16ರಂದು ನಾರಾಯಣಗುರು ಜಯಂತಿ- ಸಚಿವ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಉಡುಪಿ: ರಾಜ್ಯ ಸರ್ಕಾರದ ಸೂಚನೆಯಂತೆ ಸೆಪ್ಟೆಂಬರ್ 16ರಂದು ಬೆಳಗ್ಗೆ 10.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಬನ್ನಂಜೆಯ ನಾರಾಯಣಗುರು ಮಂದಿರದಲ್ಲಿ ಆಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಚರಣೆ ಸಂಬಂಧ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಸರ್ಕಾರ ಗುರುಗಳ ಜಯಂತಿ ಆಚರಣೆ ಅಧಿಕೃತವಾಗಿ ಘೋಷಿಸಿದ್ದು, ಅವಿಭಜಿತ ಜಿಲ್ಲೆಯ ಬಹುಕಾಲದ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಹಾಗಾಗಿ ಸಮುದಾಯದವರು ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕಿದೆ ಎಂದರು.
ರಾಜ್ಯದಲ್ಲಿ ಕಾರ್ಯಕ್ರಮ ಆಯೋಜನೆಗೆ 69 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ನಾರಾಯಣಗುರು ಜಯಂತಿಯನ್ನು ಆಚರಿಸಲಾಗುವುದು ಎಂದರು.
ಉಡುಪಿಯಲ್ಲಿ ಆಚರಣೆಯನ್ನು ಅರ್ಥಪೂರ್ಣವಾಗಿಸಲು ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ತೋನ್ಸೆ ಅವರ ಅಧ್ಯಕ್ಷತೆಯಲ್ಲಿ ಉಪಸಮಿತಿಯೊಂದನ್ನು ರಚಿಸಿ ಕಾರ್ಯಕ್ರಮ ಆಯೋಜನೆಯ ರೂಪು ರೇಷೆಯನ್ನು ಸಿದ್ದಪಡಿಸಿ ಅಪರ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಸಲ್ಲಿಸಲು ಸಚಿವರು ಸೂಚಿಸಿದರು.
ನಾರಾಯಣ ಗುರು ಕುರಿತ ಸಾಕ್ಷ್ಯಚಿತ್ರ, ಉಪನ್ಯಾಸ, ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಆಚರಿಸುವ ಬಗ್ಗೆಯೂ ಸಭೆಯಲ್ಲಿ ವಿಸ್ತøತ ಚರ್ಚೆ ನಡೆಯಿತು. ಜಿಲ್ಲಾಧಿಕಾರಿ ಟಿ ವೆಂಕಟೇಶ್ ಉಪಸ್ಥಿತರಿದ್ದರು.
ಬನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷರಾದ ಬಿ ವಿ ಪೂಜಾರಿ, ಮಲ್ಪೆ ರಾಘವೇಂದ್ರ, ನವೀನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ತಹಸೀಲ್ದಾರ್ ಮಹೇಶ್ಚಂದ್ರ, ಪಿ ಡಿ ನಯನಾ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಹರೀಶ್ ಗಾಂವ್ಕರ್ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಅನುರಾಧ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್ ವಂದಿಸಿದರು.