ಉಡುಪಿಗೆ ಇನ್ನೊಂದು ಉಪವಿಭಾಗ – ಕಂದಾಯ ಸಚಿವ ಆರ್.ವಿ.ದೇಶಪಾಂಡೆ
ಪಡುಬಿದ್ರಿ: ‘ಉಡುಪಿ ಕೇಂದ್ರವಾಗಿರಿಸಿ ಇನ್ನೊಂದು ಉಪ ವಿಭಾಗವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗು
ವುದು’ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
ಕಾಪುವಿನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಶಾಸಕರಾದ ಐವನ್ ಡಿಸೋಜ ಮತ್ತು ಲಾಲಾಜಿ ಮೆಂಡನ್ ಅವರ ಮನವಿಗೆ ಅವರು ಪ್ರತಿಕ್ರಿಯಿಸಿದರು.
‘ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ಒಂದೇ ಕಂದಾಯ ಉಪವಿಭಾಗ ಇರುವು ದರಿಂದ ಸಾರ್ವಜನಿಕರಿಗೆ ತೊಂದರೆಯಾ
ಗುತ್ತಿರುವುದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಉಡುಪಿ ಕೇಂದ್ರವಾಗಿರಿಸಿ ಇನ್ನೊಂದು ಉಪ ವಿಭಾಗವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು. ಕುಂದಾಪುರದೊಂದಿಗೆ ಉಡುಪಿ ಯಲ್ಲಿಯೂ ಉಪವಿಭಾಗ ತೆರೆಯಲು ಸರ್ಕಾರ ಚಿಂತಿಸಿದೆ’ ಎಂದರು.
‘ತಾಲ್ಲೂಕಾಗಿ ಅಸ್ತಿತ್ವಕ್ಕೆ ಬಂದಿರುವ ಕಾಪುವಿಗೆ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು ಶೀಘ್ರದಲ್ಲೇ ಅನುದಾನ ಬಿಡುಗಡೆಗೊಳಿಸಲಾಗುವುದು’ ಸಚಿವರು ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವರು ಹೆಜಮಾಡಿ ಕೋಡಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಾಂಕೇತಿಕವಾಗಿ ಉದ್ಘಾಟಿಸಿದರು. ಕಾಪು, ಪಕೀರ್ಣಕಟ್ಟೆ, ಹೆಜಮಾಡಿ ಹಾಗೂ ಇತರ ಸ್ಥಳಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು. ಬಳಿಕ ಕಾಪು ಹಳೆ ಮಾರಿಗುಡಿಗೆ ಹೋಗಿ, ಮಾರಿಯಮ್ಮ ದೇವಿಯ ದರ್ಶನ ಪಡೆದರು.
ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ ಇದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಮಧುಕೇಶ್ವರ್ ವಂದಿಸಿದರು.