ಉಡುಪಿಯಲ್ಲಿ ಧಾರಾಕಾರ ಮಳೆ; ಆಸ್ಪತ್ರೆಯಿಂದಲೇ ಡಿಸಿ ಫೋನ್ ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಿ.ಎಮ್. ಬಿಎಸ್.ವೈ
ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಿಂದಲೇ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಫೋನ್ ಕರೆ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ಪಡೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಿರುವ ಮನೆ ಹಾನಿ, ಬೆಳೆ ಹಾನಿ, ಜಾನುವಾರು ಹಾನಿ, ಜೀವ ಹಾನಿಯ ಕುರಿತು ಜಿಲ್ಲಾಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಮಳೆಯಿಂದ ಹಾನಿಗೊಳಗಾದವರಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಯಾವುದೇ ತುರ್ತು ನೆರವಿನ ಅಗತ್ಯವಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಜಿಲ್ಲೆಯಲ್ಲಿನ ರಾಜ್ಯ ವಿಪತ್ತು ಪರಿಹಾರ ನಿಧಿಯಲ್ಲಿ ಸಾಕಷ್ಟು ಅನುದಾನವಿದ್ದು, ಮಳೆಯಿಂದ ಹಾನಿಯಾದವರಿಗೆ ಶೀಘ್ರದಲ್ಲಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ , ಹಣಕಾಸಿನ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮುಖ್ಯಮಂತ್ರಿಯವರಿಗೆ ತಿಳಿಸಿದರು.
ಜಿಲ್ಲೆಯ ಮಳೆ ಪರಿಸ್ಥಿತಿ ಕುರಿತಂತೆ ರಾಜ್ಯದ ಕಂದಾಯ ಸಚಿವ ಅಶೋಕ್ ಅವರೂ ಸಹ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.