ಉಡುಪಿಯ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Spread the love

ಉಡುಪಿಯ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪುರಸ್ಕೃತ ಹಿರಿಯ ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಯು.ಎಸ್.ಶೆಣೈ ಅವರನ್ನು ಸನ್ಮಾನಿಸಲಾಯಿತು.

ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟದಲ್ಲಿ ಹಲವು ಪದಕಗಳನ್ನು ಗೆಲ್ಲುವ ಮೂಲಕ ಉಡುಪಿ ತಂಡಕ್ಕೆ ಸಮಗ್ರ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾದ ಪತ್ರಕರ್ತರಾದ ಅನಿಲ್ ಕೈರಂಗಳ, ಮುಹಮ್ಮದ್ ಶರೀಫ್, ಸುರೇಶ್ ಎರ್ಮಾಳು, ಉದಯ ಕುಮಾರ್ ಮುಂಡ್ಕೂರು, ಚೇತನ್ ಪೂಜಾರಿ ಮಟಪಾಡಿ ಅವರನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ತಂಡದ ನೇತೃತ್ವ ವಹಿಸಿದ್ದ ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಅವರನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಉಡುಪಿ ಪಿತ್ರೋಡಿ ಯಶಸ್ವಿ ಫಿಶ್‌ಮಿಲ್ನ ನಿರ್ದೇಶಕ ಉದಯ ಕುಮಾರ್, ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.

ಸಂಘದ ಸದಸ್ಯ ಜನಾರ್ದನ ಕೊಡವೂರು ಕೊಡುಗೆಯಾಗಿ ನೀಡಿದ ರಾಜ್ಯೋತ್ಸವ ಪುರಸ್ಕೃತ ಸಂಘದ ಭಾವಚಿತ್ರವನ್ನು ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರಿಗೆ ಹಸ್ತಾಂತರಿಸಲಾಯಿತು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು


Spread the love