ಉಡುಪಿ ಜಿಲ್ಲಾಡಳಿತದಿಂದ ಕಾಟಾಚಾರದ ಅಂತರಾಷ್ಟ್ರೀಯ ಯೋಗ ದಿನಾಚರಣೆ !
ಉಡುಪಿ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತದಿಂದ ಕಾಟಾಚಾರದ ಯೋಗ ದಿನಾಚರಣೆ ಆಯೋಜಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಯೋಗ ದಿನಾಚರಣೆಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು, ಜಿಲ್ಲಾಡಳಿತ ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿಂಧೂ ರೂಪೇಶ್, ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಶಾ ಜೇಮ್ಸ್ ಭಾಗವಹಿಸಿಲ್ಲ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಐದು ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಯೋಗ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳು ಭಾಗವಹಿಸುತ್ತಿದ್ದರೆ ಈ ಬಾರಿ ಯೋಗ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರದಲ್ಲಿ ಯಾರೂ ಕೂಡ ಭಾಗವಹಿಲ್ಲ. ಕಾರ್ಯಕ್ರಮವನ್ನು ಜಿಲ್ಲಾಡಳಿತ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಡಾ ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವರ ಸಹಭಾಗಿತ್ತದಲ್ಲಿ ಶುಕ್ರವಾರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಆಯೋಜಿಸಿತ್ತು.