ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ – ಪೂರ್ವಬಾವಿ ಸಭೆ
ಉಡುಪಿ: ಆಗಸ್ಟ್ 15 ರಂದು ನಡೆಯುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಕುರಿತಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಬಾವಿ ಸಭೆ ನಡೆಯಿತು.
ಆಗಸ್ಟ್ 15 ರಂದು ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಥ ಸಂಚಲನ ನಡೆಸುವ ಕುರಿತಂತೆ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮ ನಡೆಯುವ ದಿನದಂದು ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡುವಂತೆ ಆರ್.ಟಿ.ಓ ಅಧಿಕಾರಿಗೆ ಸೂಚಿಸಿದರು.
ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ಹಾಗೂ ಶೈಕ್ಷಣಿಕ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕುರಿತಂತೆ ಪಟ್ಟಿಯನ್ನು ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಬಾರಿಯ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸಿದ ವ್ಯಕ್ತಿಗಳಿಗೆ ಸನ್ಮಾನ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಅವರ ಪಟ್ಟಿಯನ್ನು ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ, ವಿವಿಧ ಇಲಾಖೆಗಳು ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರಗಳನ್ನು ತೆರೆಯುವಂತೆ ಮತ್ತು ಸಮಾರಂಭದ ಪ್ರಾರಂಭದಿಂದ ಮುಕ್ತಾಯದವರೆಗೆ ಎಲ್ಲಾ ಹಂತದಲ್ಲೂ ಹಸಿರು ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸ್ವಾತಂತ್ರೋತ್ಸವ ದಿನದಂದು ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸ್ವಾತಂತ್ರೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ನೇತೃತ್ವದ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.