ಉಡುಪಿ ಜಿಲ್ಲೆಗೆ ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲು ರೂ. 40 ಕೋಟಿ ಬಿಡುಗಡೆಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು: ಉಡುಪಿ ಜಿಲ್ಲೆಗೆ ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲು ರೂ. 40 ಕೋಟಿ ಬಿಡುಗಡೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಸಪ್ಟೆಂಬರ್ 25 ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಉಡುಪಿಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿತ್ತು. ಇದಕ್ಕೆ ತಕ್ಷಣದ ಪರಿಹಾರ ನೀಡಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ಆಗ್ರಹ ಮಾಡಿದ್ದರು.
ಉಡುಪಿ ಜಿಲ್ಲೆಯ 5 ಮಂದಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ವಿ. ಸುನಿಲ್ ಕುಮಾರ್, ಸುಕುಮಾರ್ ಶೆಟ್ಟಿ ಹಾಗೂ ಕೆ. ರಘುಪತಿ ಭಟ್ ಅವರು ಶನಿವಾರ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಪ್ರಾಕೃತಿಕ ವಿಕೋಪದಡಿ ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲು ಮೊದಲ ಹಂತದಲ್ಲಿ ತಕ್ಷಣದಲ್ಲಿ ರೂ. 40 ಕೋಟಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಐ.ಎಸ್.ಎನ್. ಪ್ರಸಾದ್ ಅವರಿಗೆ ಸೂಚನೆ ನೀಡಿದ್ದಾರೆ.
ಪ್ರಾಕೃತಿಕ ವಿಕೋಪದಡಿ ತಕ್ಷಣದ ಪರಿಹಾರಕ್ಕೆ ರೂ. 40 ಕೋಟಿ ಅನುದಾನ ಬಿಡುಗಡೆ ಮಾಡಲು ಸೂಚಿಸಿದ ಮುಖ್ಯಮಂತ್ರಿಯವರಿಗೆ ಶಾಸಕ ಕೆ. ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.