ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ!

Spread the love

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ!

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರುಎನ್ನಲಾಗಿದೆ. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಬಳಿಕ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ.

ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.


Spread the love