ಉಡುಪಿ: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಭೇಟಿ
ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವೆಡೆಗಳಲ್ಲಿ ಹಾನಿ ಸಂಭವಿಸಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಮಂಗಳವಾರ ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಹೊಂಬಾಡಿ-ಮುಂಡಾಡಿ, ಗೋಪಾಡಿ, ಕೋಟತಟ್ಟು, ಬೆಳ್ಳಂಪಳ್ಳಿ ಪ್ರದೇಶದಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಹಾನಿಯನ್ನು ಪರಿಶೀಲಿಸಿ, ಹಾನಿಗೊಳಗಾದ ಸಂತ್ರಸ್ಥರಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಭಾರತೀಯ ಹವಾಮಾನ ಇಲಾಖೆಯ ಸೂಚನೆಯಂತೆ, ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ, ಈಗಾಗಲೇ ಜುಲೈ 24 ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ಸುಮಾರು 200 ಮಿ.ಮೀ ಗೆ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕೇಂದ್ರಸ್ಥಾನ ಬಿಟ್ಟು ತೆರಳದಂತೆ ಸೂಚಿಸಲಾಗಿದ್ದು, ತಮ್ಮ ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡದಂತೆ ಮತ್ತು ಹಾನಿ ಕುರಿತು ವರದಿ ಬಂದ ಕೂಡಲೇ ಸ್ಥಳಕ್ಕೆ ತೆರಳಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೆಪ್ಸಿಬಾ ತಿಳಿಸಿದ್ದಾರೆ.
ತಗ್ಗು ಪ್ರದೇಶದಲ್ಲಿರುವ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ಯಾವುದೇ ಸಂದರ್ಭದಲ್ಲಿ ಹಾನಿಗೊಳಗಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ಸಂಖ್ಯೆ 1077 ತುರ್ತು ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಜುಲೈ 24 ರಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಸಿಂಧೂ ಬಿ ರೂಪೇಶ್ ಉಪಸ್ಥಿತರಿದ್ದರು.