ಏಪ್ರಿಲ್ 20 ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ, ಪಾನಪ್ರಿಯರ ಆಸೆ ಭಗ್ನ
ಬೆಂಗಳೂರು: ರಾಜ್ಯದಲ್ಲಿ ಬುಧವಾರದಿಂದ ಮದ್ಯ ಮಾರಾಟ ಆರಂಭವಾಗಲಿದೆ ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದ್ದು, ಪಾನಪ್ರಿಯರು ಮದ್ಯ ಸವಿಯಲು ಏಪ್ರಿಲ್ 20ರ ವರೆಗೆ ಕಾಯುವುದು ಅನಿವಾರ್ಯವಾಗಿದೆ.
ಬುಧವಾರದಿಂದ ರಾಜ್ಯದ ಎಂ.ಎಸ್.ಐ.ಎಲ್ ಮಳಿಗೆಗಳಲ್ಲಿ ಮದ್ಯ ಮಾರಾಟ ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 20ರ ವರೆಗೆ ದೇಶದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಿಸಿದ್ದು, ಬಳಿಕ ಮಾರ್ಗ ಸೂಚಿಯಲ್ಲಿ ಪುನರ್ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ.
ಕಠಿಣ ಲಾಕ್ ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎನ್ನುವ ತೀರ್ಮಾನಕ್ಕೆ ಸಿಎಂ ಯಡಿಯೂರಪ್ಪ ಬಂದಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದ ಬಳಿಕ ಮದ್ಯ ಮಾರಾಟ ಬಗ್ಗೆ ತೀರ್ಮಾನ ಮಾಡಲಾಗುವುದು. ಏಪ್ರಿಲ್ 20ರವರೆಗೆ ಪ್ರಧಾನಿಯವರು ತಿಳಿಸಿದಂತೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಲಾಗುವುದು. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುವುದು. ನಾಡಿನ ಜನತೆ ಸ್ವಯಂ ಪ್ರೇರಿತರಾಗಿ ಈ ಕ್ರಮಗಳಿಗೆ ಸಹಕರಿಸಬೇಕೆಂದು ಸಿಎಂ ಮನವಿ ಮಾಡಿದ್ದಾರೆ.