ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಸೇವೆಯ ಬಗ್ಗೆ ಆಸಕ್ತಿ ವಹಿಸಿ : ಯಶ್ಪಾಲ್ ಸುವರ್ಣ
ಉಡುಪಿ: ಕರಾವಳಿ ಜಿಲ್ಲೆ ಶೈಕ್ಷಣಿಕ ಸಾಧನೆಯಲ್ಲಿ ನಿರಂತರ ಉತ್ತಮ ಸಾಧನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದು ವಿದ್ಯಾರ್ಥಿಗಳು ಇಂಜಿನಿಯರಿಂಗ್, ಐಟಿ, ವೈದ್ಯಕೀಯ ಕ್ಷೇತ್ರದ ಜೊತೆ ಜೊತೆಗೆ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭಾರತೀಯ ಆಡಳಿತ ಸೇವೆಯಲ್ಲಿಯೂ ಆಸಕ್ತಿ ವಹಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ದ.ಕ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್. ಎಸ್. ಎಲ್. ಸಿ., ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹25 ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಮಿಥುನ್ ಎಚ್. ಮಾತನಾಡಿ ದೇಶದ ಭವ್ಯ ಭವಿಷ್ಯದ ಅಡಿಪಾಯವಾಗಿರುವ ವಿದ್ಯಾವಂತ ಯುವ ಜನತೆ ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕಿದೆ.
ಫೆಡರೇಶನ್ ನಂತಹ ಸಂಸ್ಥೆಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೀಡುತ್ತಿರುವ ಪ್ರೋತ್ಸಾಹವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಅಸ್ತಿಯಾಗುವ ಸಂಕಲ್ಪ ಮಾಡುವಂತೆ ಕರೆ ನೀಡಿದರು.
ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಾಲ ಸಿ. ಬಂಗೇರ ಸಮಾರಂಭವನ್ನುದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರೊ. ಡಾ.ನಿಕೇತನ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ,ಶ್ರದ್ಧೆ ಹಾಗೂ ಶಿಸ್ತು ಮೈಗೂಡಿಸಿಕೊಂಡು ಸಾಧನೆ ಮೂಲಕ ಬದುಕು ರೂಪಿಸಿಕೊಳ್ಳಬೇಕು ಎಂದರು.
ಸಮಾರಂಭದಲ್ಲಿ ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀರಾಮಚಂದ್ರ ಕುಂದರ್, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ರತ್ನಾಕರ ಸಾಲ್ಯಾನ್, ಅಳ ಸಮುದ್ರ ಮೀನುಗಾರಿಕಾ ಪ್ರಾ. ಸೇವಾ. ಸಹಕಾರಿ ಸಂಘದ ಅಧ್ಯಕ್ಷರಾದ ಸುಭಾಷ್ ಮೆಂಡನ್, ಪರ್ಸೀನ್ ಮೀನುಗಾರ ಸಂಘದ ಅಧ್ಯಕ್ಷರಾದ ನಾಗರಾಜ ಸುವರ್ಣ, ತಾಂಡೇಲರ ಸಂಘದ ಅಧ್ಯಕ್ಷರಾದ ರವಿರಾಜ್ ಸುವರ್ಣ, ಕನ್ನಿ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾಕರ ವಿ. ಸುವರ್ಣ, ಫೆಡರೇಶನ್ ಉಪಾಧ್ಯಕ್ಷರಾದ ಶ್ರೀ ದೇವಪ್ಪ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.
ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಫೆಡರೇಶನ್ ವ್ಯವಸ್ಥಾಪಕ ನಿರ್ದೇಶಕರಾದ ದರ್ಶನ್ ಕೆ.ಟಿ. ವಂದಿಸಿದರು.