ಕರ್ನಾಟಕದ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹ
ಉಡುಪಿ: ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಕರ್ನಾಟಕದ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಸಲ್ಲಿಸಲಾಯಿತು.
ಬಿಜೆಪಿ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆಡಿದ್ದರೆನ್ನಲಾದ ಮಾತುಗಳಿರುವ ವಿಡಿಯೋ ಬಿಜೆಪಿಯ ಆಪರೇಷನ್ ಕಮಲಕ್ಕೆ ಸಾಕ್ಷಿ. ಈಗಾಗಲೇ ಧ್ವನಿ ಮುದ್ರಿಕೆಯಲ್ಲಿರುವ ಧ್ವನಿ ತಮ್ಮದೆ ಎಂದು ಯಡಿಯೂರಪ್ಪನವರು ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ರಾಜಿನಾಮೆ ನೀಡಲು ಹಾಗೂ ಮುಂಬೈಗೆ ಕರೆದುಕೊಂಡು ಹೋಗಿ ಹೋಟೆಲ್ನಲ್ಲಿ ರಕ್ಷಣೆ ನೀಡಲು ಬಿಜೆಪಿಯೇ ಕಾರಣ ಎಂಬುದು ಸಾಬೀತಾಗಿದೆ. ಬಿಜೆಪಿಯಿಂದ ನಡೆದ ಈ ಪ್ರಜಾಪ್ರಭುತ್ವದ ಕಗ್ಗೊಲೆಗೆ ಕಾರಣರಾದ ಬಿ.ಎಸ್ ಯಡಿಯೂರಪ್ಪ ಹಾಗೂ ಅಮಿತ್ ಶಾ ರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಕರ್ನಾಟಕ ಸರಕಾರವನ್ನು ತಕ್ಷಣ ಬರ್ಕಾಸ್ತುಗೊಳಿಸಬೇಕೆಂದು ರಾಷ್ಟ್ರಪತಿಗಳಿಗೆ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಯು.ಆರ್. ಸಭಾಪತಿ, ಮಾಜಿ ಜಿಲ್ಲಾಧ್ಯಕ್ಷರಾದ ಎಂ.ಎ. ಗಫೂರ್, ಮಾಜಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಲೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಆರ್.ಜಿ.ಪಿ.ಆರ್.ಎಸ್ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್, ಪಕ್ಷದ ಮುಖಂಡರುಗಳಾದ ನೀರೆ ಕೃಷ್ಣ ಶೆಟ್ಟಿ, ಯತೀಶ್ ಕರ್ಕೇರಾ, ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ, ಕಿಶೋರ್ ಎರ್ಮಾಳ್, ವಿಲಿಯಂ ಫೆರ್ನಾಂಡಿಸ್, ಹಿರಿಯ ಮುಖಂಡರಾದ ಆನಂದ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಸುಧಾಕರ್ ಕೋಟ್ಯಾನ್, ಉಪೇಂದ್ರ ಮೆಂಡನ್, ಶುಭಾಶ್ ಕೊಳ, ಸಂಪತ್ ಕುಮಾರ್ ಉಪಸ್ಥಿತರಿದ್ದರು.