ಕುಂದಾಪುರ ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಿದ್ದತೆ ಪೂರ್ಣ
ಕುಂದಾಪುರ: ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆ ಗುರುವಾರ ನಡೆಯಲಿದ್ದು, ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ತಾಲೂಕಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಕುಂದಾಪುರ ತಾಲೂಕಿನಲ್ಲಿ ಒಟ್ಟು 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 2,457 ಮಕ್ಕಳು ಪರೀಕ್ಷೆ ಎದುರಿಸಲಿದ್ದಾರೆ. ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದ್ದು, ವಿದ್ಯಾರ್ಥಿಗಳ ಸಮಯ ಹಾಳಾಗದಂತೆ 100 ವಿದ್ಯಾರ್ಥಿಗಳಿಗೆ 1 ಆರೋಗ್ಯ ತಪಾಸಣೆ ಕೇಂದ್ರವನ್ನು ರಚಿಸಲಾಗಿದೆ. ತಾಲೂಕಿನಲ್ಲಿ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಬಸ್ಸಿನ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲೂ 2 ವಿಶೇಷ ಕೊಠಡಿಗಳನ್ನು ರಚಿಸಲಾಗಿದೆ. ಒಂದನೇ ಕೊಠಡಿಯಲ್ಲಿ ಕಂಟೈನ್ಮೆಂಟ್ ಝೋನ್ ನಿಂದ ಬಂದವರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಎರಡನೇ ಕೊಠಡಿಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ಮಾಡುವಾಗ ಸೋಂಕಿನ ಲಕ್ಷಣ ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಎರಡನೇ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 90 ದಿನಗಳು ಪರೀಕ್ಷಾ ತಯಾರಿಗೆ ಸಿಕ್ಕಿದೆ. ಈ ಬಾರಿ 8.30ಕ್ಕೆ ಪರೀಕ್ಷಾ ಕೇಂದ್ರಗಳು ತೆರೆಯಲ್ಲಿದ್ದು ವಿದ್ಯಾರ್ಥಿಗಳು ತಮ್ಮ ತಮ್ಮ ಸ್ಥಳದಲ್ಲಿ ಕೂತು ಅಧ್ಯಯನ ನಡೆಸಲು ಅವಕಾಶ ಇದೆ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ ಎಂದಿದ್ದಾರೆ.