ಕೊರಗರೊಂದಿಗೆ ಸಹಭೋಜನ- ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಉಡುಪಿ : ಜಿಲ್ಲೆಯ ಕೊರಗ ಜನಾಂಗದವರೊಂದಿಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳೊಂದಿಗೆ ಸಹಭೋಜನ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾಧಿಕರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಹಾಗೂ ಪರಿಶಿಷ್ಟ ಜಾತಿ/ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ರಡಿಯಲ್ಲಿ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ನಡೆಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದಲ್ಲಿನ ಅಸ್ಪøಶ್ಯತೆಯನ್ನು ತೊಡೆಯುವ ಉದ್ದೇಶದಿಂದ ಜಿಲ್ಲೆಯ ಆಯ್ದ ಕೊರಗ ಕಾಲೋನಿಯಲ್ಲಿ , ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಹಭೋಜನ ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸಲು ಚಿಂತಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದವರಿಂದಲೇ ಸಿದ್ದಪಡಿಸಿದ ಆಹಾರವನ್ನು ಎಲ್ಲಾ ಅಧಿಕಾರಿಗಳೊಂದಿಗೆ ಸ್ವೀಕರಿಸಲಾಗುವುದು, ಜಲ್ಲೆಯ ಜನಪ್ರತಿನಿಧಿಗಳನ್ನೂ ಸಹ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದ ಜಿಲ್ಲಾದಿಕರಿಗಳು, ಕೊರಗ ಕಲೋನಿಯನ್ನು ಗುರುತಿಸಿ ದಿನಾಂಕವನ್ನು ನಿಗಧಿಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಾಗೂ 158 ಗ್ರಾಮ ಪಂಚಾಯತ್ ಗಳಲ್ಲಿ ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಹಾಗೂ ಪರಿಶಿಷ್ಟ ಜಾತಿ/ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ರ ಕುರಿತು ಬೀದಿ ನಾಟಕಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗುವುದು, ಹಾಗೂ ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನುರಿತ ನ್ಯಾಯವಾದಿ ಅಥವಾ ನ್ಯಾಯಾಧೀಶರಿಂದ ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕರಿಗಳು ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ಕಾರ್ಯಾಗಾರವನ್ನು ಏರ್ಪಡಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಘಟನೆಗಳು, ಸಮುದಾಯಗಳ ಸಂಘಟನೆಗಳು, ಹಾಗೂ ಅಧಿಕಾರಿಗಳಿಗೆ ಅಧಿನಿಯಮಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್.ಎನ್.ರಮೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.