ಜನಾರ್ದನ ಪೂಜಾರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಗೆ ನಿಷೇದ!
ಮಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ವಿಷಯದಲ್ಲಿ ಪಕ್ಷದ ನಾಯಕರ ವಿರುದ್ದ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಲು ನಿರ್ಬಂಧ ಹೇರಿದ್ದು, ಈ ಸಂಬಂಧ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದರು.
ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದ್ದು, ಕೂಡಲೇ ಸಿದ್ದರಾಮಯ್ಯ ಅವರು ಹೈಕಮಾಂಡ್ ಜೊತೆ ಚರ್ಚೆ ನಡೆಸಿ ಅವರ ಸಲಹೆ ಕೇಳುವುದು ಸೂಕ್ತ ಇಲ್ಲವಾದಲ್ಲಿ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಿ ಬೇರೆಯವರನ್ನು ಮುಖ್ಯಮಂತ್ರಿ ಮಾಡಬಹುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಎಸ್ ಆರ್ ಟಿ ನೌಕರರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯತನ ತೋರಿಸಿದ್ದು ಇದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಲಿದೆ. ಕಾರ್ಮಿಕರ ಸಮಸ್ಯೆಯನ್ನು ಚೆನ್ನಾಗಿ ಬಲ್ಲ ಆಸ್ಕರ್ ಫೆರ್ನಾಂಡಿಸ್ ಅವರನ್ನು ಹೈಕಮಾಂಡ್ ಸಿಎಂ ಮಾಡಬಹುದು ಅಥವಾ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬಹುದು. ಮಹಿಳೆಯರಿಗೆ ಸ್ಥಾನ ನೀಡಲು ನಿರ್ಧರಿಸಿದರೆ ಮೋಟಮ್ಮ ಕೂಡ ಮುಖ್ಯಮಂತ್ರಿ ಆಗಬಹುದು. ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಕೂಡ ಮುಖ್ಯಮಂತ್ರಿ ಸ್ಥಾನ ಪಡೆಯುವ ಅರ್ಹತೆ ಹೊಂದಿದ್ದಾರೆ ಎಂದರು.