ಜಿಲ್ಲೆಯಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ 

Spread the love

ಜಿಲ್ಲೆಯಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ 

ಉಡುಪಿ: ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಭದ್ರತಾ ದೃಷ್ಠಿಯಿಂದ ಪ್ರಸ್ತುತ ಇರುವ ರಕ್ಷಣಾ ಕ್ರಮಗಳು ಹೇಗೆ ಸಮರ್ಥವಾಗಿವೆ ಎಂಬುದನ್ನು ಸ್ವಯಂ ಮೌಲ್ಯ ಮಾಪನ ಮಾಡಿಕೊಳ್ಳುವ ಉದ್ದೇಶದಿಂದ ನವೆಂಬರ್ 21 ರಿಂದ 22 ರ ವರೆಗೆ ಜಿಲ್ಲೆಯಾದ್ಯಂತ ಸಾಗರ ಕವಚ ಅಣಕು ಕಾರ್ಯಾಚರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಅವರು ಶನಿವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಸಾಗರ ಕವಚ ಅಣಕು ಕಾರ್ಯಾಚರಣೆ ಪೂರ್ವಬಾವಿ ಸಿದ್ದತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ , ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಬೀಚ್ ಗಳು, ದೇವಸ್ಥಾನ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದಲ್ಲಿ ವ್ಯಾಪಕ ತಪಾಸಣೆ ನಡೆಯಲಿದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಹಾಗೂ ಈ ಸ್ಥಳಗಳಲ್ಲಿ ಯಾವುದೇ ಅಪರಿಚಿತ ವ್ಯಕ್ತಿಗಳು ಅಥವಾ ವಸ್ತುಗಳು ಕಂಡು ಬಂದಲ್ಲಿ ಪೊಲೀಸ್ ಕಂಟ್ರೊಲ್ ರೂಂ 100 ಗೆ , ಕರಾವಳಿ ಕಾವಲು ಪಡೆ ಕಂಟ್ರೊಲ್ ರೂಂ 1093, ಜಿಲ್ಲಾಧಿಕಾರಿ ಕಂಟ್ರೊಲ್ ರೂಂ 1077 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಅಣಕು ಕಾರ್ಯಾಚರಣೆ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಕಾರ್ಯಾಚರಣೆ ಸಂದರ್ಭದಲ್ಲಿ , ಪೊಲೀಸ್ ಇಲಾಖೆವತಿಯಿಂದ ಜಿಲ್ಲೆಯಲ್ಲಿ ವಾಹನಗಳ ವ್ಯಾಪಕ ತಪಾಸಣೆ ನಡೆಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಹಾಗೂ ಮೀನುಗಾರಿಕೆಗೆ ತೆರಳುವ ದೋಣಿಗಳಲ್ಲಿ ಅಗತ್ಯ ದಾಖಲೆಪತ್ರಗಳನ್ನು ಇಟ್ಟುಕೊಳ್ಳುವಂತೆ ಹಾಗೂ ಸಮುದ್ರದಲ್ಲಿ ಅಪರಿಚಿತ ದೋಣಿಗಳು ಹಾಗೂ ವ್ಯಕ್ತಿಗಳು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಮೀನುಗಾರರ ಮುಖಂಡರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಎಂ ಪಾಟೀಲ್ ತಿಳಿಸಿದರು.

ಜಿಲ್ಲೆಯ 120 ಕಿಮೀ ಉದ್ದದ ಬೀಚ್ ನಲ್ಲಿ ಕರಾವಳಿ ಕಾವಲು ಪಡೆಯಿಂದ ಸೂಕ್ತ ತಪಾಸಣೆ ನಡೆಯಲಿದೆ, ಜನನಿಬಿಡ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಎಸ್ಪಿ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ಕರಾವಳಿ ಕಾವಲು ಪಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love