ಜೂನ್ 18ರಂದು ಉಡುಪಿಗೆ ರಾಷ್ಟ್ರಪತಿ- ಪೂರ್ವಭಾವಿ ಸಭೆ
ಉಡುಪಿ : ಗೌರವಾನ್ವಿತ ಭಾರತದ ರಾಷ್ಟ್ರಪತಿ ಜೂನ್ 18ರಂದು ಉಡುಪಿ ಜಿಲ್ಲೆಗೆ ಆಗಮಿಸಿ ಕೃಷ್ಣ ಮಠ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿರುವರು.
ಈ ಸಂಬಂಧ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೇಟಿ ವೇಳೆ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ಸವಿವರ ಚರ್ಚೆ ನಡೆಸಲಾಯಿತು.
ವಿವಿಧ ವಿಭಾಗಗಳಿಗೆ ನೋಡಲ್ ಅಧಿಕಾರಿಗಳ ನೇಮಕ, ಮುಂಜಾಗರೂಕತೆ, ಮುನ್ನೆಚ್ಚರಿಕೆ ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹೊಣೆ ವಹಿಸಲಾಯಿತು. ಮೆಡಿಕಲ್ ಯೂನಿಟ್, ಆಹಾರ ಸುರಕ್ಷಾ ಅಧಿಕಾರಿಗಳು ಮುಂತಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಅಪರ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಕುಮಾರ್, ಅಪರ ಜಿಲ್ಲಾಧಿಕಾರಿ ಅನುರಾಧ, ಉಪವಿಭಾಗಾಧಿಕಾರಿ ಶಿಲ್ಪಾನಾಗ್, ಅಡಿಷನಲ್ ಎಸ್ ಪಿ ವಿಷ್ಣುವರ್ಧನ್, ಡಿಸಿಎಫ್ ಅಮರನಾಥ್ ಎಲ್ಲ ತಹಸೀಲ್ದಾರ್ ಮತ್ತು ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸಭೆಯಲ್ಲಿದ್ದರು.