ಜೂ 8 ವಿಧಾನ ಪರಿಷತ್ ಚುನಾವಣೆ – ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ
ಉಡುಪಿ: ದಿನಾಂಕ 8 ನೇ ಜೂನ್ 2018 ರ ಶುಕ್ರವಾರದಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ.
ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ (ರಾಜ್ಯ ಶಿಷ್ಠಾಚಾರ) ಇಲಾಖೆ ದಿನಾಂಕ ೫ನೇ ಜೂನ್ ೨೦೧೮ ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು, ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೇಂದ್ರ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗು ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪದವೀಧರ ಹಾಗೂ ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ 8 ನೇ ಜೂನ್ 2018 ರ ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಾದ್ಯಂತ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ಚೆನ್ನಗಿರಿ ತಾಲೂಕು ವ್ಯಾಪ್ತಿಯಲ್ಲಿ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಅರ್ಹ ಮತದಾರರು ಇದರ ಪ್ರಯೋಜನ ಪಡೆಯುವಂತೆ ಕೋರಲಾಗಿದೆ.