ಟಿಪ್ಪು ಜಯಂತಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ: ಸಿದ್ದರಾಮಯ್ಯ
ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಯವರು, ಕಾನೂನು ಸುವ್ಯವಸ್ಥೆ ಕುರಿತು ಪರಾಮರ್ಶೆ ನಡೆಸಿದರು.
ಟಿಪ್ಪು ಜಯಂತಿಯನ್ನು ಕೆಲವರು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ರಾಜಕೀಯ ಲಾಭ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಸಮಾಜದಲ್ಲಿ ಶಾಂತಿ ಕದಡುವ ಕಾರ್ಯಕ್ಕೂ ಮುಂದಾಗುತ್ತಿದ್ದಾರೆ. ಅದಕ್ಕೆ ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿಯವರು ಹೇಳಿದರು.
ಮುಂಜಾಗ್ರತಾ ಕ್ರಮವಾಗಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು, ಕಾನೂನು ಸುವ್ಯವಸ್ಥೆಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಹೇಳಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಸಮಾಜಘಾತುಕ ಶಕ್ತಿಗಳನ್ನು ಬಂಧಿಸಿ. ಆಹಿತಕರ ಘಟನೆಗಳಿಗೆ ಕುಮ್ಮಕ್ಕು ನೀಡುವ ಮತ್ತು ಪ್ರಚೋದಿಸುವ ವ್ಯಕ್ತಿಗಳ ಮೇಲೆ ನಿಗಾ ವಹಿಸಿ ಎಂದು ತಿಳಿಸಿದರು.
ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಬಂದೋಬಸ್ತ್ ಕುರಿತು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿಯವರು ಸೂಚಿಸಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಲಹೆಗಾರರಾದ ಕೆಂಪಯ್ಯ, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಎಲ್. ಕೆ. ಅತೀಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ನಿರ್ದೇಶಕ ದಯಾನಂದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಮತ್ತಿತರರು ಸಭೆಯಲ್ಲಿದ್ದರು.