ಡಿ.13: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿ ಜಿಲ್ಲೆಯ ಮಸೀದಿಗಳಲ್ಲಿ ಪ್ರತಿಭಟನೆ
ಉಡುಪಿ : ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧ ವಾಗಿ ಹಾಗೂ ಜಾತ್ಯತೀತ ಹಂದರವನ್ನು ನಾಶ ಮಾಡಿ ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಉಡುಪಿ ಜಿಲ್ಲೆಯ ಮಸೀದಿಗಳಲ್ಲಿ ಡಿ.13ರಂದು ಶುಕ್ರವಾರ ಜುಮಾ ನಮಾಝಿನ ಬಳಿಕ ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಒಕ್ಕೂಟ ಹಾಗೂ ಸಹಭಾಗಿ ಸಂಘಟನೆಗಳ ವತಿಯಿಂದ ಈ ಮಸೂದೆಯ ವಿರುದ್ಧ ಡಿ.15 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಅಜ್ಜರ ಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನಾ ಸಭೆಯನ್ನು ಆಯೋಜಿಸ ಲಾಗಿದೆ. ಇದರಲ್ಲಿ ಗಣ್ಯರು ಹಾಗು ಚಿಂತಕರು ಭಾಗವಹಿಸಲಿರುವರು.
ದೇಶದ ಭದ್ರತೆಯ ದೃಷ್ಟಿಯಿಂದಲೂ ಇದು ಹಾನಿಕಾರಕ ಮಸೂದೆ ಯಾಗಿದ್ದು, ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ. ಮೊದಿನಬ್ಬ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.