ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಕೌಶಲ್ಯ ಅಭಿಯಾನ ಪ್ರಾರಂಭ- ಸಿದ್ದರಾಮಯ್ಯ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 5 ಲಕ್ಷ ಯುವಕ ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ‘ಕೌಶಲ್ಯ ಕರ್ನಾಟಕ’ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಅನೇಕ ಇಲಾಖೆಗಳಲ್ಲಿ ನೀಡುತ್ತಿದ್ದಾರೆ. ಆದರೆ ಎಲ್ಲಾ ಇಲಾಖೆಯ ಕೆಲಸಗಳಿಗೆ ಸಂಬಂಧಿಸಿದಂತೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಒಂದೇ ಸೂರಿನಡಿ ತಂದು ಉತ್ತಮವಾದ ತರಬೇತಿ ನೀಡಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯನ್ನು ಸ್ಥಾಪಿಸಿದ್ದೇವೆ. 2030ರ ವೇಳೆಗೆ ರಾಜ್ಯದಲ್ಲಿ ಕನಿಷ್ಠ 1.88 ಕೋಟಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವ ಗುರಿ ಇದೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಗುಣಾತ್ಮಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ರಾಜ್ಯ, ಹೊರರಾಜ್ಯ ಮತ್ತು ವಿದೇಶಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಯತ್ನಿಸಲಾಗುವುದು. 2017-18ನೇ ಸಾಲಿನಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕ-ಯುವತಿಯರ ನೋಂದಣಿ ಅಭಿಯಾನ ಆರಂಭಿಸಿದ್ದು, ಬೇಡಿಕೆ ಆಧರಿಸಿ ತರಬೇತಿ ನೀಡಲು ಇದರಿಂದ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಶಕ್ತರಾಗಿ ಮತ್ತು ಸ್ವಾವಲಂಬಿಯಾಗಿ ನಮ್ಮ ಯುವಜನತೆ ಬದುಕಬೇಕು ಆಗ ರಾಜ್ಯದ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದು ಖ್ಯಾತ ಚಲನಚಿತ್ರ ನಟ ಹಾಗೂ ಕೌಶಲ್ಯ ಕರ್ನಾಟಕದ ರಾಜ್ಯ ರಾಯಭಾರಿ ಪುನೀತ್ ರಾಜ್ಕುಮಾರ್ ನುಡಿದರು.
ಉದ್ಯೋಗ ಕೌಶಲ್ಯವನ್ನು ಕೊಡುವ ಕಾರ್ಯಕ್ರಮ ಇದಾಗಿದೆ. ವಿವಿಧ ಕ್ಷೇತ್ರದ ವಿಷಯಗಳ ಬಗ್ಗೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ತರಬೇತಿ ನೀಡಲಾಗುವುದು ಎಂದು ವಿಧಾನ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಕೆವಿಟಿಎಸ್ಡಿಸಿ ಅಧ್ಯಕ್ಷ ಮುರಳೀಧರ ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.