ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿರಲಿ : ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ
ಮಂಗಳೂರು: ನಗರ, ಪಟ್ಟಣ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನೆಲಭರ್ತಿ ಸ್ಥಳಗಳಲ್ಲಿ ವೈಜ್ಞಾನಿಕವಾಗಿ ಮಾಡಬೇಕಾಗಿದೆ. ಈ ಬಗ್ಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಅವರು ಬುಧವಾರ ತಮ್ಮ ಕಚೇರಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿವಿಧ ಟಾಸ್ಕ್ಫೋರ್ಸ್ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಟಣ ಪ್ರದೇಶಗಳಲ್ಲಿ ಮನೆಬಾಗಿಲಿನಿಂದ ತ್ಯಾಜ್ಯ ಸಂಗ್ರಹಿಸಿ, ಅವುಗಳನ್ನು ಸಂಬಂಧಿಸಿದ ನೆಲಭರ್ತಿ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ಜಿಲ್ಲೆಯ ಎಲ್ಲಾ ಪಟ್ಟಣ ಪ್ರದೇಶಗಳಲ್ಲಿ ಇದಕ್ಕಾಗಿ ಗುರುತಿಸಲಾಗಿರುವ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಯಾವುದೇ ಸಮಸ್ಯೆಗಳು ಎದುರಾಗದಂತೆ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ, ಸೋಮೇಶ್ವರ, ವಿಟ್ಲ, ಕೋಟೆಕಾರು ಪಟ್ಟಣ ಪಂಚಾಯತ್ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಜಮೀನು ಕಾದಿರಿಸಲು ಅವರು ಸೂಚಿಸಿದರು.
ಪಚ್ಚನಾಡಿ ಘಟಕದ ತ್ಯಾಜ್ಯ ವಿಲೇವಾರಿಯನ್ನು ಜೈವಿಕ ಮಾದರಿಯಲ್ಲಿ ನಿರ್ವಹಿಸಲು ಈಗಾಗಲೇ ಸಿದ್ಧತೆ ಮಾಡಲಾಗಿದೆ. ಕಳೆದ ವರ್ಷ ಪಚ್ಚನಾಡಿಯಲ್ಲಿ ನಡೆದ ತ್ಯಾಜ್ಯ ದುರಂತದ ಪರಿಹಾರ ಒದಗಿಸಲು ವಿಸ್ತ್ರತ ಯೋಜನಾ ವರದಿ ತಯಾರಿಸಲಾಗುತ್ತಿದೆ ಎಂದು ಅವರು ಹೇಳಿದರು.
ನಗರ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಬಫರ್ ಝೋನ್ ಗುರುತಿಸಲು ನಗರ ಸ್ಥಳಿಯ ಸಂಸ್ಥೆ ಹಾಗೂ ನಗರ ಯೋಜನಾ ಪ್ರಾಧಿಕಾರಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯು ಸೂಚಿಸಬೇಕು. ಇಂತಹ ಪ್ರದೇಶಗಳಲ್ಲಿ ಯಾವುದೇ ಲೇಔಟ್ ಅಥವಾ ಮನೆ ನಿರ್ಮಾಣಕ್ಕೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ನಗರ ಪ್ರದೇಶಗಳಲ್ಲಿ ಯುಜಿಡಿ ಒಳಚರಂಡಿ ವ್ಯವಸ್ಥೆ ಇಲ್ಲದ ಪ್ರದೇಶಗಳನ್ನು ಗುರುತಿಸಿ, ಅಲ್ಲಿನ ತ್ಯಾಜ್ಯ ನೀರಿನ ಹರಿವಿನ ಬಗ್ಗೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ನಗರ ಪ್ರದೇಶಗಳ ತ್ಯಾಜ್ಯ ವಿಲೇವಾರಿ ಬಗ್ಗೆ ಸಾರ್ವಜನಿಕರ ದೂರು ಸ್ವೀಕರಿಸಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅವರು ಮಹಾನಗರಪಾಲಿಕೆಗೆ ಸೂಚಿಸಿದರು. ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಗಳ ಮೇಲೆ ಆರೋಗ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಗಾ ವಹಿಸಲು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಜೆ. ಶಿಲ್ಪಾ, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಮಾಲಿನ್ಯ ನಿಯತ್ರಣ ಮಂಡಳಿ ಅಧಿಕಾರಿ ಕೀರ್ತಿ ಕುಮಾರ್ ಮತ್ತಿತರರು ಇದ್ದರು.