ದ.ಕ: ಎಸ್‍ಎಸ್‍ಎಲ್‍ಸಿ-33518, ದ್ವಿತೀಯ ಪಿಯುಸಿ-38607 ವಿದ್ಯಾರ್ಥಿಗಳು
ಮ0ಗಳೂರು : ಪ್ರಸಕ್ತ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 33518 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗೆ 38607 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.
ಅವರು ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ವರ್ಷದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ಸಿದ್ಧತೆಗಳ ಪರಿಶೀಲನೆ ನಡೆಸಲು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ, ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟ, ಪರೀಕ್ಷಾ ಪದ್ಧತಿಯು ಉತ್ತಮ ರೀತಿಯಲ್ಲಿದೆ. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಅಧ್ಯಯನ ಮಾಡಿ, ಪ್ರಾಮಾಣಿಕರಾಗಿ ಪರೀಕ್ಷೆ ಬರೆಯುವ ಸಂಪ್ರದಾಯ ಇದೆ. ಶಿಕ್ಷಕರೂ ಇದಕ್ಕೆ ಪೂರಕವಾಗಿ ಸಹಕರಿಸುತ್ತಿದ್ದಾರೆ. ಈ ಕೀರ್ತಿಯನ್ನು ಉಳಿಸಿಕೊಂಡು ಹೋಗುವಂತೆ ಅವರು ಕರೆ ನೀಡಿದರು.
ವಿದ್ಯಾರ್ಥಿಗಳು ಇಡೀ ವರ್ಷ ಅಧ್ಯಯನ ಮಾಡಿ ಪರೀಕ್ಷಾ ಸಂದರ್ಭದಲ್ಲಿ ಆತಂಕ ಮತ್ತು ಒತ್ತಡದಲ್ಲಿರುವುದು ಸಹಜ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದಾಗ ಅವರೊಂದಿಗೆ ಉತ್ತಮ ರೀತಿಯಲ್ಲಿ ಶಿಕ್ಷಕರು ವರ್ತಿಸಬೇಕು. ವಿದ್ಯಾರ್ಥಿ ಸ್ನೇಹಿಯಾಗಿ ಅವರಲ್ಲಿ ಆತ್ಮವಿಶ್ವಾಸ ಮೂಡುವಂತೆ ಶಿಕ್ಷಕರು ಇರಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಕಲಿಕೆಯಲ್ಲಿ ಮುಂದುವರಿದ ಅಥವಾ ಹಿಂದುಳಿದ ವಿದ್ಯಾರ್ಥಿಗಳ ನಡುವೆ ಯಾವುದೇ ವ್ಯತ್ಯಾಸ ತೋರದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಫ್ಯಾನು, ಬೆಳಕು, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಡ್ಡಾಯ ಇರಬೇಕು. ಇದರಲ್ಲಿ ಲೋಪವಾದರೆ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಡಾ.ಕೆ.ಜಿ. ಜಗದೀಶ ಎಚ್ಚರಿಸಿದರು.
ದ್ವಿತೀಯ ಪಿಯುಸಿ: ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗೆ ಮಂಗಳೂರು ಜಿಲ್ಲಾ ಖಜಾನೆಯಿಂದಲೇ ಇಡೀ ಜಿಲ್ಲೆಯ ಪರೀಕ್ಷಾ ಕೇಂದ್ರಕ್ಕೆ ಆಯಾ ಪರೀಕ್ಷಾ ದಿನದಂದು ಪ್ರಶ್ನೆಪತ್ರಿಕೆ ರವಾನೆಯಾಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಲಾಗಿದೆ. ಪ್ರತೀ ಪರೀಕ್ಷಾ ಕೊಠಡಿಗಳಲ್ಲಿ ಗರಿಷ್ಠ 30 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ. ಪರೀಕ್ಷಾ ಕೊಠಡಿಗಳಿಗೆ ಮೇಲ್ವಿಚಾರಕರನ್ನು ಲಾಟರಿ ಮೂಲಕ ಆಯ್ಕೆ ಮಾಡಿ ನಿಯೋಜಿಸಲಾಗುವುದು. ಪರೀಕ್ಷಾ ವಿಷಯಗಳ ಉಪನ್ಯಾಸಕರನ್ನು ಆಯಾ ವಿಷಯದ ಪರೀಕ್ಷೆಯಂದು ಕರ್ತವ್ಯಕ್ಕೆ ನಿಯೋಜಿಸುವಂತಿಲ್ಲ ಎಂದು ಹೇಳಿದರು.
ಪದವಿಪೂರ್ವ ಶಿಕ್ಷಣ ಉಪನಿರ್ದೇಶಕ ತಿಮ್ಮಯ್ಯ ಮಾತನಾಡಿ, ಮಾರ್ಚ್ 9ರಿಂದ 27ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಜಿಲ್ಲೆಯ 198 ಕಾಲೇಜುಗಳ 38607 ವಿದ್ಯಾರ್ಥಿಗಳು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 19128 ಹುಡುಗರು ಹಾಗೂ 19479 ಹುಡುಗಿಯರಿದ್ದಾರೆ. ಕಲಾ ವಿಭಾಗದಲ್ಲಿ 5796, ವಾಣಿಜ್ಯ ವಿಭಾಗದಲ್ಲಿ 17396 ಹಾಗೂ ವಿಜ್ಞಾನ ವಿಭಾಗದಲ್ಲಿ 15415 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 34428 ಪ್ರಥಮ ಬಾರಿಗೆ, 1391 ವಿದ್ಯಾರ್ಥಿಗಳು ಪುನರಾವರ್ತಿತ ಹಾಗೂ 2788 ಮಂದಿ ಖಾಸಗಿಯಾಗಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು. ಪರೀಕ್ಷೆ ಆರಂಭವಾದ 30ನಿಮಿಷಗಳ ಬಳಿಕ ವಿದ್ಯಾರ್ಥಿಗೆ ಕೊಠಡಿಯೊಳಗೆ ಪ್ರವೇಶವಿಲ್ಲ ಎಂದರು.
ಎಸ್‍ಎಸ್‍ಎಲ್‍ಸಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೋ ಸಭೆಯಲ್ಲಿ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾರ್ಚ್ 30ರಿಂದ ಏಪ್ರಿಲ್ 13ರವರೆಗೆ ನಡೆಯಲಿದೆ. ಜಿಲ್ಲೆಯ 500 ಶಾಲೆಗಳ 33518 ವಿದ್ಯಾರ್ಥಿಗಳು 91 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 17267 ಗಂಡುಮಕ್ಕಳು ಹಾಗೂ 16251 ಹೆಣ್ಣುಮಕ್ಕಳು ಒಳಗೊಂಡಿದ್ದಾರೆ ಎಂದರು.
ಒಟ್ಟು ವಿದ್ಯಾರ್ಥಿಗಳಲ್ಲಿ 32222 ಶಾಲಾ ವಿದ್ಯಾರ್ಥಿಗಳು ಹಾಗೂ 1296 ಮಂದಿ ಖಾಸಗಿಯಾಗಿ ಪರೀಕ್ಷೆಗೆ ನೋಂದಾಯಿಸಿದ್ದಾರೆ. ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಸೌಕರ್ಯ, ಪ್ರಶ್ನೆಪತ್ರಿಕೆಗಳನ್ನು ರವಾನಿಸಲು ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಮೇಲುಸ್ತುವಾರಿಗೆ ನೇಮಿಸಲಾಗುವುದು. ಬೆಳಿಗ್ಗೆ 9.30 ಗಂಟೆಯ ನಂತರ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಉಪಕಾರ್ಯದರ್ಶಿ ಎನ್.ಆರ್. ಉಮೇಶ್, ಪುತ್ತೂರು ಉಪವಿಭಾಗಾಧಿಕಾರಿ ರಘುನಂದನ ಮೂರ್ತಿ ಮತ್ತಿತರರು ಇದ್ದರು.