ನಗರ ಪ್ರದೇಶಗಳಲ್ಲೂ ವಲಸೆ ಕಾರ್ಮಿಕರಿಗೆ ಊಟ- ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಪ್ರದೇಶಗಳಲ್ಲಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರಿಗೆ, ನಿರ್ಗತಿಕರಿಗೆ, ಭಿಕ್ಷಕುಕರಿಗೆ ಆಯಾ ಸ್ಥಳೀಯ ಸಂಸ್ಥೆಗಳ ಮೂಲಕ ಊಟ ಒದಗಿಸಲಾಗುವುದು ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಲಾಕ್‍ಡೌನ್‍ನಿಂದಾಗಿ ಯಾರೂ ಹಸಿವಿನಿಂದ ಇರಬಾರದು. ಈ ನಿಟ್ಟಿನಲ್ಲಿ ಆಯಾ ನಗರ ಸ್ಥಳೀಯ ಸಂಸ್ಥೆಗಳು, ತಮ್ಮ ವ್ಯಾಪ್ತಿಯಲ್ಲಿರುವ ವಲಸೆ ಕಾರ್ಮಿಕರು, ನಿರ್ಗತಿಕರನ್ನು ಗುರುತಿಸಿ ಅವರಿಗೆ ಊಟ, ತಿಂಡಿ ಒದಗಿಸಬೇಕು. ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರವನ್ನು ಅಗತ್ಯಬಿದ್ದಲ್ಲಿ ಪಡೆಯುವಂತೆ ಸಚಿವರು ತಿಳಿಸಿದರು.
ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರ ಮೂಲಕ ಆಯಾ ಪಟ್ಟಣ ವ್ಯಾಪ್ತಿಯಲ್ಲಿ ಮನೆಮನೆಗೆ ಭೇಟಿ ನೀಡಿ, ಪ್ರತೀ ಮನೆಯ ಸದಸ್ಯರ ಆರೋಗ್ಯ ಮಾಹಿತಿ ಪಡೆದು 10 ದಿನಗಳೊಳಗೆ ವರದಿ ಸಿದ್ಧಗೊಳಿಸುವಂತೆ ಸಚಿವರು ಸೂಚಿಸಿದರು.