ನಿಷೇಧಿತ ಮಾದಕ ದ್ರವ್ಯ ಮಾರಾಟ – ಇಬ್ಬರ ಬಂಧನ, ರೂ. 16.13 ಲಕ್ಷ ಮೌಲ್ಯದ ಸೊತ್ತು ವಶಕ್ಕೆ
ಮಂಗಳೂರು: ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ.
ಬಂಧಿತರನ್ನು ಉಳ್ಳಾಲ ನಿವಾಸಿ ಮೊಹಮ್ಮದ್ ಇಶಾನ್ (35) ಮತ್ತು ಜಾಫರ್ ಸಾಧಿಕ್ (35) ಎಂದು ಗುರುತಿಸಲಾಗಿದೆ.
ಆರೋಪಿತರು ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡಲು ಪ್ರಯತ್ನಿಸುತ್ತಿದ್ದರು. ಆರೋಪಿತರಿಂದ 9,00,000/- ರೂ ಮೌಲ್ಯದ 407 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 16,13,800/- ರೂ ಆಗಬಹುದು.
ಆರೋಪಿತರಲ್ಲಿ ಜಾಫರ್ ಸಾದಿಕ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ ಹಾಗೂ ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 09 ಪ್ರಕರಣಗಳು ದಾಖಲಾಗಿರುತ್ತವೆ.
ಮೊಹಮ್ಮದ್ ಇಶಾನ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ MDMA ಮಾರಾಟ ಪ್ರಕರಣ ದಾಖಲಾಗಿರುತ್ತದೆ.
ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿ ರವರ ನೇತೃತ್ವದಲ್ಲಿ ಈ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.