ಪಿ.ವಿ. ಮೋಹನ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ಮಂಗಳೂರು: ಎಐಸಿಸಿ ಸದಸ್ಯರಾದ ಪಿ.ವಿ. ಮೋಹನ್ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇವರು 37 ವರುಷಗಳಿಂದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿ ನಾಯಕರಾಗಿ ಗುರುತಿಸಿಕೊಂಡ ಅವರು ಎಸ್.ಎಸ್.ಯು. ಐ ಮೂಲಕ ರಾಜ್ಯ ಯುವ ಕಾಂಗ್ರೆಸ್‍ನ ಕಾರ್ಯದರ್ಶಿ, ಉಳ್ಳಾಲ ಮತ್ತು ದಕ್ಷಿಣ ಬ್ಲಾಕ್‍ನ ಕಾರ್ಯಕಾರಿಸಮಿತಿಯ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ, ಲಕ್ಷದ್ವೀಪದ ಕಾಂಗ್ರೆಸ್ ಪಕ್ಷದ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ, ಸೆನೆಟ್ ಹಾಗೂ ಸಿಂಡಿಕೇಟ್ ಸದಸ್ಯ, ಕೇಂದ್ರದ ಕನಿಷ್ಟ ವೇತನಾ ಸಲಹಾ ಮಂಡಳಿಯ ಸದಸ್ಯ ಮತ್ತು ದಕ್ಷಿಣ ವಲಯ ರೈಲ್ವೆ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತನಾಗಿ ಮಂಗಳೂರು ಬೆಂಗಳೂರು ರೈಲ್ವೆಗಾಗಿ 24 ದಿವಸಗಳ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಹೋರಾಟ ನಡೆಸಿದ್ದಾರೆ. ಎಂಡೋಸಲ್ಪಾನ್ ಸಂತ್ರಸ್ತರ ಪರವಾಗಿ ಕೂಡಾ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ. ಆಕ್ರಮ ಗಣಿಗಾರಿಕೆಯ ವಿರುದ್ಧ ಪಕ್ಷವು ಸಂಘಟಿಸಿದ 18 ದಿನಗಳ ಬಳ್ಳಾರಿ ಪಾದಯಾತ್ರೆಯಲ್ಲಿ ಭಾಗವಹಿಸಿದ ಇವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ಯುವ ಜನತೆಯ ಜತೆಗೂಡಿ 18 ದಿನಗಳ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. ಅಲ್ಲದೆ ಹಲವು ಜನಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ.