ಪ್ರವಾಸೋದ್ಯಮದಿಂದ ಉದ್ಯೋಗ ಸೃಷ್ಟಿ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಮಂಗಳೂರು: ಕರಾವಳಿ ಪ್ರವಾಸೋದ್ಯಮ ಸಾಂಸ್ಕøತಿಕ, ಸಾಂಪ್ರದಾಯಿಕ, ದೇವಾಲಯಗಳನ್ನು ಹೊಂದಿರುವ ಧಾರ್ಮಿಕ ಕೇಂದ್ರ ಮತ್ತು ಜಿಲ್ಲೆಯಲ್ಲಿ ವಿಸ್ತಾರವಾದ ಸುಂದರ ಸಮುದ್ರ ಕಿನಾರೆ ಹೊಂದಿದೆ, ಆದರೂ ಇನ್ನಷ್ಟು ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಶುಕ್ರವಾರ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ದಕ್ಷಿಣ ಕನ್ನಡ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಷನ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2019” ಯನ್ನು ಪ್ರವಾಸೋದ್ಯಮ ಹಾಗೂ ಉದ್ಯೋಗ : ಸರ್ವರಿಗೂ ಉಜ್ವಲ ಭವಿಷ್ಯ ಎಂಬ ಧ್ಯೇಯ ವ್ಯಾಖ್ಯಾನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸಾಕಷ್ಟು ಧಾರ್ಮಿಕ ಕೇಂದ್ರಗಳನ್ನು ಹೊಂದಿರುವುದು ಈ ಜಿಲ್ಲೆಯ ಭಾಗ್ಯ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ, ಸಮುದ್ರ ಕಿನಾರೆ ಹಾಗೂ ಬೋಟ್ ಹೌಸ್‍ಗಳನ್ನು ನಿರ್ಮಾಣ ಮಾಡಿ ಇದರಿಂದ ಜಲಸಾರಿಗೆ ಮತ್ತು ಉದ್ಯೋಗ ನಿರ್ಮಿಸಲಾಗುತ್ತಿದೆ. ರಾಜ್ಯ ಸರಕಾರವು ಪ್ರವಾಸೋದ್ಯಮಕ್ಕೆ ರೂ. 500 ಕೋಟಿ ಮೊತ್ತ ಬಿಡುಗಡೆ ಮಾಡುವ ಮೂಲಕ ರಾಜ್ಯದಲ್ಲಿ ಉತ್ತಮ ಪ್ರವಾಸಿ ತಾಣಗಳನ್ನು ನಿರ್ಮಾಣ ಮಾಡುವ ಮಹತ್ವದ ಯೋಜನೆ ಮಾಡಲಾಗುವುದು. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್ ನದಿಗಳ ಉತ್ಸವ ಮತ್ತು ಸಮುದ್ರ ಕಿನಾರೆಯಲ್ಲಿ ಬೇರೆ ಬೇರೆ ರೀತಿಯ ಪ್ರವಾಸಿಗರನ್ನು ಆಕರ್ಷಿಸುವಂತಹಾ ಉತ್ಸವಗಳನ್ನು ಮಾಡುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಸುಮಾರು ಆರು ಐಲ್ಯಾಂಡ್ ಪ್ರದೇಶಗಳಿವೆ ಅದನ್ನು ಕಂದಾಯ ಇಲಾಖೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಯೋಗದೊಂದಿಗೆ ಸಂಬಂಧಪಟ್ಟ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಮಾಡಿ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶ ಹೊಂದಿರುವ ಮಹತ್ವದ ಯೋಜನೆಯನ್ನು ಚಿಂತನೆ ನಡೆಸಲಾಗಿದೆ. ಜಿಲ್ಲಾಡಳಿತ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಒದಗಿಸುವ ನಕ್ಷೆಗಳನ್ನು ಅಳವಡಿಸಬೇಕು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪಕ್ಷ ಭೇದ ಮರೆತು ಸ್ವ ಇಚ್ಛಾಶಕ್ತಿಯಿಂದ ಅಭಿವೃದ್ಧಿಗೆ ಕೈ ಜೋಡಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯ ಪ್ರವಾಸೋದ್ಯಮ ವಿಶ್ವ ಮಟ್ಟದಲ್ಲಿ ಪ್ರಖ್ಯಾತಿಗಳಿಸುವಂತಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಶಾಸಕ, ಐವನ್ ಡಿ’ಸೋಜಾ, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮಂಗಳೂರು, ಮಹಾನಗರ ಪಾಲಿಕೆ ಆಯುಕ್ತರು ಅಜಿತ್ ಕುಮಾರ್ ಹೆಗ್ಡೆ ಎಸ್, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಐಸಾಕ್ ವಾಜ್, ದ.ಕ ಹೊಟೇಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ಕುಡುಪಿ ಜಗದೀಶ್ ಶೆಣೈ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಡಾ. ಉದಯ ಶೆಟ್ಟಿ ಉಪಸ್ಥಿತರಿದ್ದರು.