ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಯಶ್ಪಾಲ್ ಸುವರ್ಣ ಆಕ್ರೋಶ
ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗ ಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು ಕತ್ತರಿಸಿ ತೆಗೆದು ಪರೀಕ್ಷೆ ಬರೆಯಲು ಅನುಮತಿಸುವ ಅಮಾನವೀಯ ಘಟನೆಯ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಮುಸ್ಲಿಂ ಓಲೈಕೆಗೆ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ಬೀದರ್ನಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಹಾಕುವಂತೆ ಸೂಚಿಸಿದ್ದು, ಜನಿವಾರ ತೆಗೆಯಲು ಒಪ್ಪದ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರನ್ನಗಿಸಿ ಉನ್ನತ ಶಿಕ್ಷಣದ ಕನಸು ನುಚ್ಚುನೂರು ಮಾಡಿದೆ.
ಹಿಜಾಬ್ ಹಾಗೂ ಬುರ್ಕಾ ಧರಿಸಿ ಪರೀಕ್ಷೆ ಬರೆಯಲು ವಿಶೇಷ ಮುತುವರ್ಜಿ ತೋರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದಲ್ಲಿ ಅತ್ಯಂತ ಪಾವಿತ್ರ್ಯತೆ ಹೊಂದಿರುವ ಜನಿವಾರ, ಮಹಿಳಾ ವಿದ್ಯಾರ್ಥಿಗಳ ಮಂಗಳ ಸೂತ್ರವನ್ನು ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ಹಿಂದೂ ವಿರೋಧಿ ನಿಲುವು ಮುಂದುವರೆಸಿದೆ.
ಪರೀಕ್ಷಾ ಕೇಂದ್ರದ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸುವ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಈ ಬಗ್ಗೆ ಕ್ಷಮೆ ಯಾಚಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಿರಂತರವಾಗಿ ಮುಸ್ಲಿಂ ತುಷ್ಟೀಕರಣಕ್ಕಾಗಿ ಹಿಂದೂ ಧಾರ್ಮಿಕ ಭಾವನೆ, ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ ನಡೆಸುತ್ತಿದ್ದು, ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿರುವ ಸರ್ಕಾರದ ವಿರುದ್ಧ ಜನತೆ ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.